ಕಾಂಗ್ರೆಸ್ ಪಕ್ಷ ವಿಸರ್ಜಿಸುವ ಕಾಲ ಸನ್ನಿಹಿತವಾಗಿದೆ: ಜಗದೀಶ್ ಶೆಟ್ಟರ್

Update: 2019-06-11 16:37 GMT

ಬಳ್ಳಾರಿ, ಜೂ.11: ಸ್ವಾತಂತ್ರದ ಬಳಿಕ ಕಾಂಗ್ರೆಸ್ ಪಕ್ಷ ವಿಸರ್ಜಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಇಲ್ಲಿನ ಪಾರ್ವತಿ ನಗರದಲ್ಲಿರುವ ಬಸವ ಭವನದಲ್ಲಿಂದು ಸಂಸದ ವೈ ದೇವೇಂದ್ರಪ್ಪಅವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ ಹೋರಾಟದ ಸಲುವಾಗಿ ಕಟ್ಟಿದ್ದ ಕಾಂಗ್ರೆಸ್ ಪಕ್ಷವನ್ನು ಸ್ವಾತಂತ್ರದ ಬಳಿಕ ವಿಸರ್ಜನೆ ಮಾಡುವುದಾಗಿ ಮಹಾತ್ಮ ಗಾಂಧಿಯೇ ಹೇಳಿದ್ದರು. ಅಂದು ಸಾಧ್ಯವಾಗಿರಲಿಲ್ಲ, ಇದೀಗ ಅಂತಹ ಕಾಲ ಬಂದಿದೆ ಎಂದರು.

ದೇಶದಲ್ಲೀಗ ಪ್ರಧಾನಿ ನರೇಂದ್ರ ಮೋದಿ ಅಲೆಯಿದೆ. ಹೀಗಾಗಿ, ಯಾವ ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿಲ್ಲ. ದೇಶದ ಕೆಲ ರಾಜ್ಯಗಳಲ್ಲಿ ಮೈತ್ರಿಕೂಟ ಪಕ್ಷಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕೂಡಲೇ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ ಪಕ್ಷದ ಮುಖಂಡರ ಸಭೆ ಕರೆದು ಕಾಂಗ್ರೆಸ್ ಪಕ್ಷ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಂದಾಲ್ ಉಕ್ಕು ಕಾರ್ಖಾನೆಗೆ ಅಂದಾಜು 3,667 ಎಕರೆ ಭೂಮಿಯನ್ನು ಪರಭಾರೆ ಮಾಡಿರುವ ವಿಚಾರದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸರಕಾರದ ಸಚಿವರು ಭೂಮಿ ಪರಭಾರೆ ವಿಚಾರದಲ್ಲಿ ದೊಡ್ಡಮಟ್ಟದ ಡೀಲಿಂಗ್ ನಡೆಸಿದ್ದಾರೆ. ಅಂದಾಜು ಸಾವಿರಾರು ಕೋಟಿ ರೂ. ಬೆಲೆಬಾಳುವ ಭೂಮಿಯನ್ನು ಕೇವಲ ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲುರವರು ಮೊನ್ನೆ ನಡೆದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಜಿಂದಾಲ್ ಉಕ್ಕು ಕಾರ್ಖಾನೆ ಪರ ನಿಂತಿದ್ದಾರೆ ಎಂಬ ಸುದ್ದಿಯನ್ನು ಮಾಧ್ಯಮಗಳು ಬಿತ್ತರಿಸಿದ್ದು, ಅದೆಲ್ಲ ಶುದ್ಧ ಸುಳ್ಳು. ಅವರು ಕೈಗಾರಿಕೆಗಳ ಅಭಿವೃದ್ಧಿಯ ದೃಷ್ಟಿಕೋನದಲ್ಲಿ ಮಾತನಾಡಿದ್ದಾರೆ. ಹಾಗಂತ ಸ್ವತಃ ಶಾಸಕರೇ ಒಪ್ಪಿಕೊಂಡಿದ್ದಾರೆ ಎಂದರು.

ಜೂ.13ರಂದು ಪ್ರತಿಭಟನೆ: ಜಿಂದಾಲ್ ಉಕ್ಕು ಕಾರ್ಖಾನೆಗೆ ಭೂಮಿ ಪರಭಾರೆ ವಿರೋಧಿಸಿ ಜೂ.13ರಂದು ಬೆಂಗಳೂರಿನಲ್ಲಿ ಉಗ್ರ ಸ್ವರೂಪದ ಹೋರಾಟ ರೂಪಿಸಲಾಗಿದೆ. ಆ ಹೋರಾಟದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಶಾಸಕರು, ಸಂಸದರು ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿಗೊಳಿಸಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News