ಬಿತ್ತನೆ ಬೀಜ-ರಸಗೊಬ್ಬರ ಪೂರೈಕೆಗೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

Update: 2019-06-12 15:15 GMT

ಬೆಂಗಳೂರು, ಜೂ. 12: ಮುಂಗಾರು ಮಳೆ ಆರಂಭವಾಗುತ್ತಿದ್ದು, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ರಸಗೊಬ್ಬರ ಮತ್ತು ಬಿತ್ತನೆ ಬೀಜ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿಗಳು, ಜಿ.ಪಂ.ಕಾರ್ಯ ನಿರ್ವಹಣಾಧಿಕಾರಿಗಳು ಜನಸ್ನೇಹಿ, ಪ್ರಾಮಾಣಿಕತೆ, ಪಾರದರ್ಶಕತೆಯಿಂದ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದ ಅವರು, ತಾಲೂಕು ಕಚೇರಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದರೆ ಸಮಸ್ಯೆಗಳೇ ಇರುವುದಿಲ್ಲ ಎಂದು ಹೇಳಿದರು.

ಹಲವು ವರ್ಷಗಳಿಂದ ತಹಸೀಲ್ದಾರ್ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ವ್ಯಾಜ್ಯಗಳು ಬಗೆಹರಿದಿಲ್ಲ. ಖಾತೆ ನಿರ್ವಹಣೆ ವಿಚಾರದಲ್ಲಿ ಪದೆ ಪದೇ ಕಚೇರಿಗೆ ಅಲೆದಾಡಿಸುವುದು ಸರಿಯಲ್ಲ. ಇದರಿಂದ ಸರಕಾರಕ್ಕೆ ಒಳ್ಳೆಯ ಹೆಸರು ಬರುವುದಿಲ್ಲ ಎಂದರು.

ಚುನಾವಣೆ ನೀತಿ ಸಂಹಿತೆ ನಡುವೆಯೂ ಬರಗಾಲದ ನಿರ್ವಹಣೆ ವಿಚಾರದಲ್ಲಿ ಅಧಿಕಾರಿಗಳು ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದು, ಕುಡಿಯುವ ನೀರು ಮತ್ತು ಮೇವಿನ ಕೊರತೆ ಪರಿಹರಿಸಿದ್ದಾರೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಶ್ಲಾಘಿಸಿದರು.

ಉದ್ಯೋಗ ಖಾತ್ರಿಯಡಿ ಕೆಲವೆಡೆ ಉತ್ತಮವಾಗಿ ಕೆಲಸವಾಗುತ್ತಿದೆ. ಇನ್ನು ಹೆಚ್ಚಿನ ಕೆಲಸ ಆರಂಭಿಸಬೇಕಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವರು ಹೆಚ್ಚು ಆಸಕ್ತಿ ವಹಿಸಿದ್ದಾರೆ. 8 ಕೋಟಿಗೂ ಹೆಚ್ಚು ಮಾನವ ದಿನ ಸೃಷ್ಟಿಸಲಾಗುತ್ತಿದೆ. ಕೇಂದ್ರದಿಂದ ಈ ಯೋಜನೆಯಡಿ ಹಣ ಬಾರದಿದ್ದರೂ ರಾಜ್ಯವೆ ಹಣ ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.

ಸಚಿವರಾದ ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಡಿ.ಸಿ.ತಮ್ಮಣ್ಣ, ಬಂಡೆಪ್ಪ ಕಾಶೆಂಪೂರ್, ಕೃಷ್ಣಭೈರೇಗೌಡ, ಝಮೀರ್ ಅಹಮ್ಮದ್ ಖಾನ್, ಜಯಮಾಲ, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News