ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್‌ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ

Update: 2019-06-12 17:04 GMT

ಬೆಂಗಳೂರು, ಜೂ. 12: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳ ಪೈಕಿ ಈಗಾಗಲೇ 51 ಲಕ್ಷ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ ಸೀಡಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಉಳಿದ 4 ಲಕ್ಷ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಈ ತಿಂಗಳ ಒಳಗೆ ಬ್ಯಾಂಕ್ ಖಾತೆಗಳ ಆಧಾರ್ ಜೋಡಣೆ ಮುಗಿಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬುಧವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿ.ಪಂ. ಸಿಇಓ ಮತ್ತು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು, ಸಿಇಒಗಳು ಕಡ್ಡಾಯವಾಗಿ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ, ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಕೆಲವು ಹಾಸ್ಟೆಲ್ ಗಳಲ್ಲಿ ಅನಧಿಕೃತವಾಗಿ ಕೆಲವರು ಉಳಿದುಕೊಂಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕು. ಎಸ್ಟಿಪಿ-ಟಿಎಸ್ಪಿ ಯೋಜನೆಗಳಡಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಅವರು ಇದೇ ವೇಳೆ ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ನಿಗದಿತ ಸಂಖ್ಯೆಗೆ ಸೀಮಿತವಾಗಿ ವಿದ್ಯಾರ್ಥಿಗಳ ದಾಖಲಾತಿ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಒಟ್ಟು 1,860 ವಿದ್ಯಾರ್ಥಿ ನಿಲಯಗಳಿದ್ದು, ಈ ಪೈಕಿ 1,525 ಸ್ವಂತ ಕಟ್ಟಡದಲ್ಲಿ ನಡೆಯುತ್ತಿದೆ. 342 ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಸ್ವಂತ ಕಟ್ಟಡಕ್ಕೆ ನಿವೇಶನ ಗುರುತಿಸಲು ಹಾಗೂ ಮುಂದಿನ 2 ವರ್ಷಗಳಲ್ಲಿ ‘ಸಿ’ ವರ್ಗದಲ್ಲಿರುವ ವಿದ್ಯಾರ್ಥಿ ನಿಲಯಗಳನ್ನು ‘ಎ’ ವರ್ಗಕ್ಕೆ ತರಬೇಕು ಎಂದು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುದೀಕರಣಕ್ಕೆ ಎಸ್ಕಾಂಗಳಲ್ಲಿ 11,200 ಪ್ರಕರಣಗಳು ಬಾಕಿ ಇವೆ. ಅಧಿಕಾರಿಗಳು ಸಭೆಗೆ ನೀಡಿರುವ ಮಾಹಿತಿಗೂ ಎಸ್ಕಾಂ ನೀಡಿದ ಮಾಹಿತಿಗೂ ವ್ಯತ್ಯಾಸವಿದೆ. ಎಲ್ಲ ಜಿಲ್ಲಾಧಿಕಾರಿಗಳು ಈ ಅಂಕಿ-ಅಂಶಗಳನ್ನು ಜೂ.20ರೊಳಗೆ ಮರುಪರಿಶೀಲಿಸಿ ಸಲ್ಲಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ, ಆಹಾರ ಸಚಿವ ಝಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News