ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಭೂಮಿ ಗುರುತಿಸಿ: ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚನೆ

Update: 2019-06-13 15:42 GMT

ಬೆಂಗಳೂರು, ಜೂ. 13: ಮುಖ್ಯಮಂತ್ರಿ ಬಹುಮಹಡಿ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಕೂಡಲೇ ಜಮೀನು ಗುರುತಿಸಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಅರಸು ವಸತಿ ಯೋಜನೆಯಡಿ ಶೋಷಿತ ವರ್ಗದವರಿಗೆ ವಸತಿ ಸೌಲಭ್ಯ ಮಂಜೂರಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ನಿಗದಿ ಪಡಿಸಲಾಗಿರುವ 63,196 ಗುರಿಗೆ ಎದುರಾಗಿ ಕೇವಲ 32,075 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಶೀಘ್ರವೇ ಆಸಕ್ತಿ ವಹಿಸಿ, ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಫಲಾನುಭವಿಗಳನ್ನು ಗುರುತಿಸಿ ಮನೆ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಕುಮಾರಸ್ವಾಮಿ ನಿರ್ದೇಶನ ನೀಡಿದರು.

ವಿವಿಧ ಜಿಲ್ಲೆಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನದ ಶೇ.75 ರಷ್ಟನ್ನು ಬಿಡುಗಡೆ ಮಾಡಲಾಗುವುದು. ಕೂಡಲೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಗಳಿಗೆ ಮಂಜೂರಾದ 4080 ಕಾಮಗಾರಿಗಳಲ್ಲಿ 765 ಪೂರ್ಣಗೊಂಡಿದೆ. 1939 ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಎಲ್ಲ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ಪ್ರತಿ 3 ತಿಂಗಳಿಗೊಮ್ಮೆ ತಪ್ಪದೆ ನಡೆಸಬೇಕು. ಹೈ.ಕ.ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಲು ಅನುವಾಗುವಂತೆ ತುರ್ತಾಗಿ ಭರ್ತಿ ಕ್ರಮ ವಹಿಸಲಾಗುವುದು ಎಂದರು.

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಕುಮಾರಸ್ವಾಮಿ ಇದೇ ವೇಳೆ ಸೂಚಿಸಿದರು. ಸಭೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News