ಯುವ ಬರಹಗಾರರ ಚೊಚ್ಚಲ ಕೃತಿ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Update: 2019-06-13 17:29 GMT

ಬೆಂಗಳೂರು ಜೂ. 13: ಕನ್ನಡ ಪುಸ್ತಕ ಪ್ರಾಧಿಕರದ ವತಿಯಿಂದ 2018ನೆ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹ ಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು 18ರಿಂದ 35 ವರ್ಷ ವಯೋಯಿತಿಯವರಾಗಿರಬೇಕು. ಸ್ವ-ವಿವರದೊಂದಿಗೆ ದೃಢೀಕೃತ ಎಸೆಸೆಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾಗಿ ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.

ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು.

ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂದಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಅರ್ಜಿಗಳನ್ನು ಜುಲೈ 6ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ಕಳುಹಿಸಿಕೊಡಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂ.ಸಂಖ್ಯೆ: 080-2248 4516/2210 7704 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News