ಔರಾದ್ಕರ್ ಸಮಿತಿ ಅನುಷ್ಠಾನ: 10 ದಿನಗಳಲ್ಲಿ ಅಂತಿಮ ತೀರ್ಮಾನ- ಗೃಹ ಸಚಿವ ಎಂ.ಬಿ.ಪಾಟೀಲ್

Update: 2019-06-14 16:33 GMT

ಬೆಂಗಳೂರು, ಜೂ.14: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರುವ ಸಂಬಂಧ ಔರಾದ್ಕರ್ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನ ಮಾಡುವ ಸಂಬಂಧ 10 ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಎಂ.ಬಿ.ಪಾಟೀಲ್ ತಿಳಿಸಿದರು.

ಶುಕ್ರವಾರ ವಿಧಾನಸೌಧದಲ್ಲಿ ಔರಾದ್ಕರ್ ಸಮಿತಿ ವರದಿ ಕುರಿತು ಒಳಾಡಳಿತ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಎದುರು ಎರಡು ಪ್ರಮುಖ ಬೇಡಿಕೆಗಳನ್ನು ಮಂಡಿಸಿದ್ದೇವೆ. ಬೇರೆ ಇಲಾಖೆ ಹಾಗೂ ಗೃಹ ಇಲಾಖೆ ನಡುವೆ ಇರುವ ವೇತನ ತಾರತಮ್ಯ ಹಾಗೂ ಭಡ್ತಿ ವಿಚಾರವಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಔರಾದ್ಕರ್ ಸಮಿತಿ ಶಿಫಾರಸ್ಸು ಮೇರೆಗೆ ವೇತನ ಹೆಚ್ಚಳ ಮಾಡಿದರೆ, 600 ಕೋಟಿ ರೂ.ಹೊರೆ ಆಗುತ್ತದೆ. ಸಕಾರಾತ್ಮಕವಾದ ನಿರ್ಧಾರ ಮಾಡಲು ಮುಖ್ಯಮಂತ್ರಿ ಮನಸ್ಸು ಮಾಡಿದ್ದಾರೆ. 10 ದಿನಗಳ ಒಳಗೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಒಂದು ವಾರದ ನಂತರ ಪೊಲೀಸರಿಗೆ ಸಿಹಿ ಸುದ್ದಿ ಸಿಗುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಪೊಲೀಸ್ ಇಲಾಖೆ, ಕಾರಾಗೃಹಗಳ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ವೇತನ ಶ್ರೇಣಿ ಸಂಬಂಧಿಸಿದಂತೆ ವಿಸ್ತೃತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹಾಗೂ ಈ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಡಾ.ಎಸ್.ಸುಬ್ರಹ್ಮಣ್ಯ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಡಿಜಿಪಿ ನೀಲಮಣಿ ಎನ್.ರಾಜು, ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಖ ರಾಘವೇಂದ್ರ ಔರಾದ್ಕರ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News