ರೈತರ ಬಗ್ಗೆ ಮೃದು ಧೋರಣೆ ಇರಲಿ: ಬ್ಯಾಂಕರ್‌ಗಳಿಗೆ ಸಿಎಂ ಕುಮಾರಸ್ವಾಮಿ ಸಲಹೆ

Update: 2019-06-14 16:37 GMT

ಬೆಂಗಳೂರು, ಜೂ. 14: ಹದಿನೈದು ವರ್ಷಗಳಲ್ಲಿ ಕರ್ನಾಟಕ 12 ವರ್ಷ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಆದುದರಿಂದ ಬ್ಯಾಂಕುಗಳು ರೈತರ ಬಗ್ಗೆ ಸ್ವಲ್ಪ ಮೃದು ಧೋರಣೆಯನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

ಶುಕ್ರವಾರ ಸಾಲ ಮನ್ನಾ ಸಂಬಂಧ ತನ್ನ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಬ್ಯಾಂಕರ್‌ಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಸಾಲಮನ್ನಾ ಯೋಜನೆಯಡಿ 4 ವರ್ಷಗಳಲ್ಲಿ ಹಂತ-ಹಂತವಾಗಿ ಬ್ಯಾಂಕುಗಳಿಗೆ ಮೊತ್ತ ಪಾವತಿಸುವುದಾಗಿ ತಿಳಿಸಲಾಗಿತ್ತು. ಆದರೆ, ಇದೀಗ ಒಂದೇ ವರ್ಷದೊಳಗಾಗಿ ಎಲ್ಲ ಅರ್ಹ ಖಾತೆಗಳಿಗೆ ಸರಕಾರದ ಮಾರ್ಗಸೂಚಿಯನ್ವಯ ಸಂಪೂರ್ಣ ಮೊತ್ತ ಪಾವತಿ ಮಾಡಲಾಗಿದೆ. ಆದುದರಿಂದ ಈ ರೈತರಿಗೆ ಮತ್ತೆ ಬೆಳೆ ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದರು.

ಮಾಧ್ಯಮಗಳಲ್ಲಿ ರೈತರ ಸಾಲ ಖಾತೆಯಿಂದ ಮನ್ನಾ ಮೊತ್ತ ಹಿಂಪಡೆದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸರಕಾರದ ಮಾರ್ಗಸೂಚಿಯ ಅನ್ವಯ ಫಲಾನುಭವಿಗಳನ್ನು ಗುರುತಿಸುವಾಗ ಕೆಲವು ಬ್ಯಾಂಕುಗಳು ತಪ್ಪುಗ್ರಹಿಕೆಯಿಂದ ಲೋಪವುಂಟಾಗಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು.

ಎನ್‌ಪಿಎ ಸಾಲಗಳ ಮನ್ನಾ ಮೊತ್ತ ಬಿಡುಗಡೆಗೆ ಸರಕಾರಿ ಆದೇಶ ಹೊರಡಿಸಿದ್ದು, ಈ ತಿಂಗಳೊಳಗಾಗಿ ಎಲ್ಲ ಬ್ಯಾಂಕುಗಳ ಎಲ್ಲ ಅರ್ಹ ಫಲಾನುಭವಿಗಳ ಸಾಲ ಖಾತೆಗೆ ಸಾಲಮನ್ನಾ ಮೊತ್ತ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಮನವಿ ಮಾಡಲಾಯಿತು. ಈ ಯೋಜನೆಯಲ್ಲಿ ಹಗಲು ರಾತ್ರಿ ಶ್ರಮಿಸಿದ, ಅಧಿಕಾರಿಗಳು, ಬ್ಯಾಂಕಿನ ಅಧಿಕಾರಿಗಳು, ಸಿಬ್ಬಂದಿಯನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಭೂಮಾಪನಾ ಇಲಾಖೆ ಆಯುಕ್ತ ಮುನೀಶ್ ಮೌದ್ಗಿಲ್ ಸೇರಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News