ನೇತ್ರದಾನ-ರಕ್ತದಾನ ಶ್ರೇಷ್ಠ ಕಾರ್ಯ: ಡಾ.ಸುಜಾತಾ ರಾಥೋಡ್

Update: 2019-06-14 17:07 GMT

ಬೆಂಗಳೂರು, ಜೂ.14: ಮನುಷ್ಯ ಸತ್ತ ನಂತರ ನೇತ್ರದಾನ ಮಾಡಿದಂತೆ, ಬದುಕಿದ್ದಾಗ ರಕ್ತದಾನ ಶ್ರೇಷ್ಠ ಕಾರ್ಯವಾಗಿದೆ ಎಂದು ಮಿಂಟೊ ಆಸ್ಪತ್ರೆಯ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ತಿಳಿಸಿದ್ದಾರೆ.

ಶುಕ್ರವಾರ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನಗರದ ಜೀನ್ ಹೆನ್ರಿ ಡ್ಯುನಾಂಟ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ರಕ್ತದಾನ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವುದೆಂದರೆ ಸಮಾಜವನ್ನು ಒಟ್ಟಾಗಿಸುವ ಮಹಾಕಾರ್ಯವಾಗಿದೆ. ಸದೃಢ ಸಮಾಜ ನಿರ್ಮಿಸುವಲ್ಲಿ ಇದು ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದರು.

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚೆನ್ನಣ್ಣನವರ್ ಮಾತನಾಡಿ, ರಕ್ತದಾನ ಮಾಡುವುದು ಪ್ರತಿಯೊಬ್ಬ ವ್ಯಕ್ತಿಯ ನಾಗರಿಕ ಜವಾಬ್ದಾರಿಯಾಗಿದೆ. ಅದರಲ್ಲಿಯೂ ಯುವಕರು ನಿಯಮಿತವಾಗಿ ರಕ್ತದಾನ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಎಸ್.ನಾಗಣ್ಣ ಮಾತನಾಡಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು 2020ರಲ್ಲಿ ಶತಮಾನೋತ್ಸವದ ಹೊಸ್ತಿಲಿನಲ್ಲಿದೆ. ಇದಕ್ಕೆ, ಪೂರಕವೆಂಬಂತೆ ನಮ್ಮ ಎಲ್ಲ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸೇವಾ ಕಾರ್ಯಕ್ರಮಗಳಿಗೆ ಬೆನ್ನೆಲುಬಾಗಿ ಸಹಕರಿಸುತ್ತಿರುವ ಎಲ್ಲ ಸ್ವಯಂ ಸೇವಕರ ಕಾರ್ಯ ಶ್ಲಾಘನೀಯ ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 25ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದಂತಹ 16 ಸ್ವಯಂಪ್ರೇರಿತ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಈ ವೇಳೆ ಪ್ರವರ್ಣ ಕೇಂದ್ರದ ಕಮಾಂಡೆಂಟ್ ಮೇಜರ್ ಜನರಲ್ ಎನ್.ಜೆ.ಜಾರ್ಜ್, ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ.ಎಂ.ಕೆ.ಶ್ರೀಧರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News