ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ

Update: 2019-06-15 17:30 GMT

ಹೊಸದಿಲ್ಲಿ, ಜೂ. 15: ರಾಜ್ಯ ಸರಕಾರ ಕೈಗೊಳ್ಳಲು ಉದ್ದೇಶಿಸಿರುವ ಮಹತ್ವಾಕಾಂಕ್ಷೆಯ ‘ಮೇಕೆದಾಟು ಯೋಜನೆ’ಗೆ ಅನುಮೊದನೆಗೆ ನೀಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶನಿವಾರ ದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕ ರಾಜ್ಯವು 2019ರ ಜನವರಿ 18ರಂದು ಕೇಂದ್ರಕ್ಕೆ ಮೇಕೆದಾಟು ಯೋಜನೆ ಸಂಬಂಧ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಿದೆ. ಈ ಯೋಜನೆಯಿಂದ 4.75 ಟಿಎಂಸಿ ನೀರನ್ನು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಬಳಸುವ ಹಾಗೂ 400 ಮೆ.ವ್ಯಾ.ವಿದ್ಯುತ್ ಉತ್ಪಾದಿಸುವ ಉದ್ದೇಶವಿದೆ. ಇದು ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಕರ್ನಾಟಕದ ನೆಲದಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಯಾಗಿರುವುದರಿಂದ ಈ ಯೋಜನೆಗೆ ಅನುಮತಿ ನೀಡಲು ತಮಿಳುನಾಡು ಸರಕಾರದ ಅಭಿಪ್ರಾಯ ಪಡೆಯುವ ಅಗತ್ಯವಿರುವುದಿಲ್ಲ. ಆದುದರಿಂದ ಶೀಘ್ರವೇ ಈ ಯೋಜನೆಗೆ ಅನುಮತಿ ನೀಡಬೇಕೆಂದು ಕೋರಿದರು.

ಕೃಷ್ಣಾ ಜಲವಿವಾದಗಳ ನ್ಯಾಯಾಧಿಕರಣ-2 ರಾಜ್ಯಕ್ಕೆ 166 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ. ಆದರೆ ಕೃಷ್ಣಾ ನ್ಯಾಯಾಧಿಕರಣದ ಆದೇಶ ಗೆಜೆಟ್ ಅಧಿಸೂಚನೆ ಹೊರಡಿಸದ ಕಾರಣ ರಾಜ್ಯದ ಪಾಲಿನ ನೀರಿನ ಸದ್ಬಳಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಮಹದಾಯಿ ಜಲ ವಿವಾದ ನ್ಯಾಯಾಧಿಕರಣವೂ ರಾಜ್ಯಕ್ಕೆ 13.2 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಈ ಕುರಿತು ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸದ ಕಾರಣ ಬಹುಕಾಲದಿಂದ ನನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ ನಗರಗಳು ಹಾಗೂ ದಾರಿಯಲ್ಲಿರುವ ಪಟ್ಟಣ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ- ಬಂಡೂರಿ ನಾಲಾ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಯಾಲಯದಲ್ಲಿ ಕಾವೇರಿ ಜಲಾನಯನ ಪ್ರದೇಶದ ರಾಜ್ಯಗಳು ಪ್ರಕರಣಗಳನ್ನು ದಾಖಲಿಸಿದ್ದಾಗ್ಯೂ, ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುವ ಷರತ್ತು ವಿಧಿಸಿ, ಗಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ರೀತಿ ಕೃಷ್ಣಾ ಹಾಗೂ ಮಹದಾಯಿ ನ್ಯಾಯಾಧಿಕರಣಗಳ ನೀರು ಹಂಚಿಕೆ ಕುರಿತಂತೆ ನ್ಯಾಯಾಲಯದ ತೀರ್ಪು ನಿರೀಕ್ಷಿಸಿ, ಗಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು.

‘ಮಹದಾಯಿ, ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವ ಬಗ್ಗೆ ಸಂಬಂಧಿಸಿದ ರಾಜ್ಯಗಳೊಂದಿಗೆ ಶೀಘ್ರದಲ್ಲೆ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ’

-ಕುಮಾರಸ್ವಾಮಿ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News