ಜೂ.21 ರಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2019-06-15 17:34 GMT

ಬೆಂಗಳೂರು, ಜೂ.15: ಎಸೆಸೆಲ್ಸಿಯ ಪೂರಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ಪರೀಕ್ಷಾ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

ಜೂ.21 ರಿಂದ 28 ರವರೆಗೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆಗೆ ಹಾಗೂ ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲು ಬೆಂಗಳೂರು ದಕ್ಷಿಣ ಜಿಲ್ಲೆ ಮತ್ತು ಬೆಂಗಳೂರು ಉತ್ತರ ಜಿಲ್ಲೆ ಉಪ ನಿರ್ದೇಶಕರು ಪತ್ರದ ಮೂಲಕ ಕೋರಲಾಗಿತ್ತು.

ಇದೀಗ ಪೊಲೀಸ್ ಇಲಾಖೆ ಆದೇಶ ಹೊರಡಿಸಿದ್ದು ಎಸೆಸೆಲ್ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂತೆಯ ಕಲಂ 144ನೆ ಪ್ರಕರಣದ ಅನ್ವಯ ಜೂ.21 ರಿಂದ 28ರ ವರೆಗೆ ಪರೀಕ್ಷೆಗಳು ನಡೆಯುವ ದಿನಗಳಂದು ಹಾಗೂ ಪರೀಕ್ಷಾ ಸಮಯದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ 74 ಮತ್ತು ಬೆಂಗಳೂರು ಉತ್ತರ ಜಿಲ್ಲೆಯ 53 ಪರೀಕ್ಷಾ ಕೇಂದ್ರಗಳ ಬಳಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News