ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆಗೆ ಯತ್ನ: ಯಡಿಯೂರಪ್ಪ ಸೇರಿದಂತೆ ಪ್ರಮುಖರು ಪೊಲೀಸ್ ವಶಕ್ಕೆ

Update: 2019-06-16 13:28 GMT

ಬೆಂಗಳೂರು, ಜೂ.16: ಜಿಂದಾಲ್ ಕಂಪೆನಿಗೆ ಭೂಮಿ ಮಾರಾಟ  ಸೇರಿದಂತೆ ಸಮ್ಮಿಶ್ರ ಸರ್ಕಾರವನ್ನು ವಿರೋಧಿಸಿ ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

ಇಲ್ಲಿನ ಆನಂದರಾವ್ ವೃತ್ತದಿಂದ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಮುಖಂಡರಾದ ಅರವಿಂದ ಲಿಂಬಾವಳಿ, ಆರ್.ಅಶೋಕ್ ಸೇರಿದಂತೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಸದಸ್ಯರು ಪಾದಯಾತ್ರೆ ಮೂಲಕ ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದರು.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಜಿಂದಾಲ್ ಕಂಪೆನಿಗೆ ಭೂಮಿಯನ್ನು ಗುತ್ತಿಗೆ ನೀಡಲಿ. ಆದರೆ, ಏಕಾಏಕಿ, ಬರೋಬ್ಬರಿ 3 ಸಾವಿರಕ್ಕೂ ಅಧಿಕ ಎಕರೆ ಭೂಮಿ ಮಾರಾಟ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಸ್ವತಃ ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿಗಳ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದ ಅವರು, ಸರಕಾರ ಭೂಮಿ ನೀಡಲೇಬೇಕೆಂದು ಹಠ ಹಿಡಿದಿರುವುದನ್ನು ನೋಡಿದರೆ ಇದರಲ್ಲಿ ಭಾರೀ ಪ್ರಮಾಣದ ಕಮಿಷನ್ ನಡೆದಿರುವ ಸಾಧ್ಯತೆ ಇದೆ ಎಂದು ಯಡಿಯೂರಪ್ಪ ದೂರಿದರು. ಮೈತ್ರಿ ಸರಕಾರ ಎಲ್ಲ ರಂಗಳಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ. ರೈತರ ಸಾಲ ಮನ್ನಾ ಎಂಬುದು ಕೇವಲ ಕಣ್ಣೊರೆಸುವ ತಂತ್ರ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಹೇಳಿದ್ದರಿಂದ ಜನತೆ ಅವರಿಗೆ 38 ಸ್ಥಾನಗಳನ್ನು ಕೊಟ್ಟರು. ಇಲ್ಲದಿದ್ದರೆ, ಇಷ್ಟು ಸ್ಥಾನಗಳೂ ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಸರಕಾರ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಅನೇಕ ಕಡೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಒಬ್ಬ ಸಚಿವರೂ ಕೂಡ ಪ್ರವಾಸ ಕೈಗೊಳ್ಳುತ್ತಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಸರಕಾರವನ್ನು ಬಡಿದೆಬ್ಬಿಸುವ ಕೆಲಸ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

ಆರ್.ಅಶೋಕ್ ಮಾತನಾಡಿ, ಕುಮಾರಸ್ವಾಮಿ ಅವರು ನಮ್ಮ ಜತೆ ಚರ್ಚೆ ಮಾಡುವ ಮೊದಲು ಸಾರ್ವಜನಿಕರ ಜತೆ ಚರ್ಚಿಸಲಿ. ನಾವು ಪ್ರತಿಭಟನೆ ನಡಸುತ್ತಿರುವುದು ಜನರ ಪರವಾಗಿ. ಅನೇಕ ಕಡೆ ರೈತರ ಸಾಲಮನ್ನಾವಾಗದೆ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಈಗಲೂ ಬ್ಯಾಂಕಿನವರು ನೋಟಿಸ್ ನೀಡುತ್ತಿರುವುದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ನಡೆಯುತ್ತಿವೆ. ರೈತರ ಖಾತೆಗೆ ಜಮೆ ಮಾಡಿದ್ದ ಹಣವನ್ನು ಹಿಂಪಡೆಯಲಾಗಿದೆ. ಇದು ಮೈತ್ರಿ ಸರಕಾರ ನಡೆದುಕೊಳ್ಳುವ ರೀತಿ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News