×
Ad

ಶಾಲೆಯಿಂದ ಹೊರಗುಳಿದ 70 ಸಾವಿರ ಮಕ್ಕಳು: ಶಿಕ್ಷಣ ಇಲಾಖೆಯಿಂದ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆ

Update: 2019-06-17 22:40 IST

ಬೆಂಗಳೂರು, ಜೂ.17: ಎಪ್ಪತ್ತು ಸಾವಿರ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅವರನ್ನು ಮರಳಿ ಶಾಲೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ.ಜಾಫರ್ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ದಾಖಲಿಸಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಈ ವಿಭಾಗೀಯ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳ ಬಗ್ಗೆ ನಿಮ್ಮಲ್ಲಿ ಯಾವುದೇ ಮಾಹಿತಿ ಇಲ್ಲ. ಮಕ್ಕಳನ್ನು ಗುರುತಿಸಲು ವೈಜ್ಞಾನಿಕ ವಿಧಾನವನ್ನು ಅನುಸರಿಸಿಲ್ಲ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಕಮಿಟಿಯ ಸಭೆಯನ್ನೂ ಸೇರಿಲ್ಲ ಯಾಕೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಕಿಡಿಕಾರಿತು. ಜು.12ರೊಳಗೆ ಮಕ್ಕಳನ್ನು ಶಾಲೆಗೆ ಮರಳಿ ತರಲು ಅನುಸರಿಸುತ್ತಿರುವ ಕ್ರಮಗಳೇನು. ಶಾಲೆಯಿಂದ ಹೊರಗುಳಿದವರ ಮರು ನೋಂದಣಿಗೆ ಕೈಗೊಂಡ ಕ್ರಮಗಳೇನು. ಸ್ಪಷ್ಟ ನೀತಿ ರೂಪಿಸಲು ಕೈಗೊಂಡ ಕ್ರಮಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News