ತುಮಕೂರಿನಲ್ಲಿ ವೈದ್ಯರ ಮುಷ್ಕರ: ಚಿಕಿತ್ಸೆಗಾಗಿ ರೋಗಿಗಳ ಪರದಾಟ

Update: 2019-06-17 18:42 GMT

ತುಮಕೂರು, ಜೂ.17: ಪಶ್ಚಿಮ ಬಂಗಾಳದ ಎನ್.ಆರ್.ಎಸ್. ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ)ದ ವತಿಯಿಂದ ನಗರದಲ್ಲಿ ಮುಷ್ಕರ ನಡೆಸಲಾಯಿತು. 

ನಗರದ ಟೌನ್‍ಹಾಲ್ ವೃತ್ತದಲ್ಲಿರುವ ಭಾರತೀಯ ವೈದ್ಯಕೀಯ ಸಂಘದ ಕಚೇರಿ ಮುಂಭಾಗದ ಜಮಾಯಿಸಿದ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಹಲ್ಲೆಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಘೋಷಣೆಗಳನ್ನು ಕೂಗಿದರು. ನಗರದಾದ್ಯಂತ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಇಂದು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿತ್ತು. ಜತೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು  ಖಾಸಗಿ ವೈದ್ಯರುಗಳು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು. ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಮುಷ್ಕರದ ಮಾಹಿತಿ ತಿಳಿಯದೆ ನಗರಕ್ಕೆ ಬಂದಿದ್ದ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದ ದೃಶ್ಯ ಕಂಡು ಬಂತು. 

ವೈದ್ಯರ ಮುಷ್ಕರಕ್ಕೆ ಖಾಸಗಿ ಆಸ್ಪತ್ರೆಗಳು ಬೆಂಬಲ ವ್ಯಕ್ತಪಡಿಸಿ, ಓಪಿಡಿ ಬಂದ್ ಮಾಡಿದ ಹಿನ್ನೆಲೆಯಲ್ಲಿ,ಜಿಲ್ಲಾಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ರೋಗಿಗಳ ಸಂಖ್ಯೆ ಕಿಕ್ಕಿರಿದು ನೆರೆದಿದ್ದು, ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ, ಸರಕಾರಿ ವೈದ್ಯರುಗಳು ಕಪ್ಪುಪಟ್ಟಿ ಧರಿಸಿ ರೋಗಿಗಳಿಗೆ ಚಿಕಿತ್ಸೆ ನೀಡಿದರು. 

ಐಎಂಎ ಕಚೇರಿ ಬಳಿ ಮುಷ್ಕರ ನಿರತ ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ್, ಪದೇ ಪದೇ ಈ ರೀತಿಯ ಹಲ್ಲೆಗಳು ವೈದ್ಯರ ಮೇಲೆ, ವೈದ್ಯಕೀಯ ಸಿಬ್ಬಂದಿ ಮೇಲೆ, ಆಸ್ಪತ್ರೆಗಳ ಮೇಲೆ ನಡೆಯುತ್ತಲೇ ಇವೆ. ಈ ಬಗ್ಗೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಈ ಹಿಂದೆಯೂ ದಾವಣಗೆರೆ, ಹಾಸನ ಹಾಗೂ ತುಮಕೂರಿನಲ್ಲಿ ಕಿರಿಯ ವೈದ್ಯರ ಮೇಲೆ ಹಲ್ಲೆಗಳು ನಡೆದಿದ್ದವು. ಆ ಸಂದರ್ಭದಲ್ಲಿ ಹಲ್ಲೆ ನಡೆಸಿದವರನ್ನು ಬಂಧಿಸಲು ಪೊಲೀಸರು ಹಿಂದೆ ಮುಂದೆ ನೋಡಿದರು. ಆಗ ಅಂದಿನ ಗೃಹ ಮಂತ್ರಿಯಾಗಿದ್ದ ಡಾ.ಜಿ.ಪರಮೇಶ್ವರ್ ಅವರು ಹಲ್ಲೆಕೋರರ ಬಂಧನಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ವೈದ್ಯರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಯಾಗುವವರೆಗೂ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ ಎಂದರು. 

ವೈದ್ಯರ ಮೇಲೆ ಹಲ್ಲೆ ನಡೆಸುವುದರಿಂದ ಇತರೆ ರೋಗಿಗಳ ಚಿಕಿತ್ಸೆಗೂ ತೊಂದರೆಯಾಗುತ್ತದೆ. ಒಂದು ವೇಳೆ ವೈದ್ಯರು ತಪ್ಪು ಮಾಡಿದರೆ, ಆ ಬಗ್ಗೆ ಹಿರಿಯ ವೈದ್ಯರ ಸಮ್ಮುಖದಲ್ಲಿ ಮಾತುಕತೆ ನಡೆಸಲಿ. ಅದನ್ನು ಏಕಾಏಕಿ ಹಲ್ಲೆ ನಡೆಸುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಇದರಿಂದ ಮುಂದಿನ ಪೀಳಿಗೆಯ ಯುವಕರು ವೈದ್ಯ ವೃತ್ತಿಗೆ ಮಾಡಲು ಹಿಂದೇಟು ಹಾಕುವ ಸಾಧ್ಯತೆ ಹೆಚ್ಚಾಗಿದೆ ಎಂದರು. 

ಭಾರತೀಯ ವೈದ್ಯಕೀಯ ಸಂಘದ ತುಮಕೂರು ಶಾಖೆ ಅಧ್ಯಕ್ಷ ಡಾ.ಪರಮೇಶ್ವರಪ್ಪ ಮಾತನಾಡಿ, ವೈದ್ಯರ ಮೇಲೆ ಹಲ್ಲೆ ನಡೆಸುವುದನ್ನು ತಡೆಗಟ್ಟಲು ಕೇಂದ್ರ ಸರಕಾರ ಒಂದು ಸೂಕ್ತ ಕಠಿಣ ಕಾನೂನು ಜಾರಿಗೊಳಿಸಬೇಕು. ಪಶ್ಚಿಮ ಬಂಗಾಳದ ಸರಕಾರದಿಂದ ಯಾವುದೇ ರೀತಿಯ ಸ್ಪಷ್ಟ ಕ್ರಮ ಆಗಿಲ್ಲ. ವೈದ್ಯರ ಯಾವುದೇ ಬೇಡಿಕೆಯನ್ನು ಈಡೇರಿಸಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಸರಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ ಕಠಿಣವಾದ ಕಾನೂನನ್ನು ಫೋಕ್ಸೋ ಮಾದರಿಯಲ್ಲಿ ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸಬೇಕು ಎಂದು ವೈದ್ಯರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ವೈದ್ಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News