ರಾಜಕಾಲುವೆ ಕಾಮಗಾರಿ ವಿಳಂಬ: ಮೇಯರ್ ಗಂಗಾಂಬಿಕೆ ಅಸಮಾಧಾನ

Update: 2019-06-18 16:21 GMT

ಬೆಂಗಳೂರು, ಜೂ.18: ದತ್ತಾತ್ರೇಯ ವಾರ್ಡ್‌ನ ಲಿಂಕ್ ರಸ್ತೆಯಲ್ಲಿನ ರಾಜ ಕಾಲುವೆ ಕಾಮಗಾರಿ ಇನ್ನೂ ಅಪೂರ್ಣಗೊಂಡಿರುವ ಬಗ್ಗೆ ಮೇಯರ್ ಗಂಗಾಂಬಿಕೆ, ಗುತ್ತಿಗೆದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಸಮಾರೋಪಾದಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

ಮಂಗಳವಾರ ಬೆಳಗ್ಗೆ ರಾಜಕಾಲುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಳೆದ ವರ್ಷವೇ ಕಾಮಗಾರಿ ಪೂರ್ಣಗೊಳಿಸಬೇಕಿತ್ತು. ಒಂದು ವರ್ಷವಾದರೂ ಕಾಮಗಾರಿ ಕುಂಟುತ್ತಾ ಸಾಗುತ್ತಿರುವ ಬಗ್ಗೆ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಎರಡು ಕಿ.ಮೀ ಉದ್ದದ ರಾಜಕಾಲುವೆ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಅದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಗುತ್ತಿಗೆದಾರರಿಗೆ ಸಕಾಲಕ್ಕೆ ಹಣವನ್ನು ಬಿಡುಗಡೆ ಮಾಡಲಾಗಿದೆ. 10 ಕೋಟಿ ರೂ.ಗಳ ಪೈಕಿ 4 ಕೋಟಿ ರೂ.ಗಳನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಆದರೂ ಗುತ್ತಿಗೆದಾರರು ಮಳೆಗಾಲ ಆರಂಭವಾದರೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಅಲ್ಲದೆ ಶೇ.70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಶೇ.30ರಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಪಾಲಿಕೆ ಸದಸ್ಯ ಮತ್ತು ಮಾಜಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ, ಕಳೆದ ವರ್ಷವೇ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಈ ಭಾಗದ ಅಪಾರ್ಟ್‌ಮೆಂಟ್ ನಿವಾಸಿಗಳು ಸಂಪೂರ್ಣ ಸಹಕಾರ ನೀಡಿದ್ದರು. ಆದರೂ, ಟೆಂಡರ್‌ನಲ್ಲಿ ಸೂಚಿಸಿದಂತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿದಿಲ್ಲ ಎಂದು ಅವರು ತಿಳಿಸಿದರು.

ಮಳೆ ಹೆಚ್ಚಾಗಿ ಬರುವ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಇಲ್ಲದಿದ್ದಲ್ಲಿ ಸುತ್ತಮುತ್ತಲಿನ ನಿವಾಸಿಗಳು ತೊಂದರೆ ಅನುಭವಿಸುವುದು ಖಚಿತ ಎಂದು ಮೇಯರ್ ಗಮನಕ್ಕೆ ತಂದರು. ಪರಿಶೀಲನಾ ಸ್ಥಳದಲ್ಲಿ ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದಲ್ ವಾಜೀದ್ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News