ಡಿಜಿಪಿ ನೀಲಮಣಿ ರಾಜುಗೆ ಹೈಕೋರ್ಟ್ ತುರ್ತು ನೋಟಿಸ್

Update: 2019-06-18 16:27 GMT

ಬೆಂಗಳೂರು, ಜೂ.18: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ನೀಲಮಣಿ ಎನ್.ರಾಜು ಅವರನ್ನು ನೇಮಕ ಮಾಡುವಾಗ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಡಿಜಿಪಿ ಎಂ.ಎನ್.ರೆಡ್ಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಯುಪಿಎಸ್‌ಸಿ ಕಾರ್ಯದರ್ಶಿ ಮತ್ತು ನೀಲಮಣಿ ಎನ್.ರಾಜು ಅವರಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ಮಧ್ಯಂತರ ಮನವಿ ಪುರಸ್ಕರಿಸದ ಕಾರಣ ರೆಡ್ಡಿ ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಸಿದ್ದಾರೆ. ಯುಪಿಎಸ್‌ಸಿ ಸಮಿತಿ ಶಿಫಾರಸು ಮಾಡುವ ಹೆಸರನ್ನು ಡಿಜಿಪಿ ಹುದ್ದೆಗೆ ಪರಿಗಣಿಸಬೇಕು. ಈ ಕುರಿತಂತೆ ಸುಪ್ರೀಂಕೋರ್ಟ್‌ನ ಸ್ಪಷ್ಟ ಆದೇಶವಿದ್ದರೂ ಅದನ್ನು ಸಾರಾಸಗಟು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News