ಪಾಕ್ ಕ್ರಿಕೆಟ್ ತಂಡ ನಿಷೇಧಕ್ಕೆ ಕೋರ್ಟ್‌ಗೆ ಮೊರೆ

Update: 2019-06-19 04:04 GMT

ಲಾಹೋರ್: ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ವಿರುದ್ಧದ ಪಂದ್ಯವನ್ನು 89 ರನ್ ಅಂತರದಲ್ಲಿ ಸೋತ ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಪಾಕಿಸ್ತಾನಿ ಅಭಿಮಾನಿಯೊಬ್ಬ ಗುಜ್ರನ್‌ವಾಲಾ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಪಾಕಿಸ್ತಾನ ಕ್ರಿಕೆಟ್ ತಂಡವನ್ನು ನಿಷೇಧಿಸಬೇಕು ಮತ್ತು ಆಯ್ಕೆ ಸಮಿತಿಯನ್ನು ವಜಾ ಮಾಡಬೇಕು ಎಂದು ಕೋರಿದ್ದಾರೆ.

ಮ್ಯಾಂಚೆಸ್ಟರ್‌ನಲ್ಲಿ ರವಿವಾರ ನಡೆದ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಹೀನಾಯ ಸೋಲು ಕಂಡಿರುವ ಬಗ್ಗೆ ಅಭಿಮಾನಿಗಳು ಹಾಗೂ ಮಾಜಿ ಆಟಗಾರರು ತಂಡದ ವಿರುದ್ಧ ಕಿಡಿ ಕಾರಿದ್ದಾರೆ.

ಐದು ಪಂದ್ಯಗಳಿಂದ ಕೇವಲ ಮೂರು ಅಂಕ ಪಡೆದಿರುವ ಪಾಕಿಸ್ತಾನ ತಂಡ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಅಪ್ಘಾನಿಸ್ತಾನ ಎಲ್ಲ ಪಂದ್ಯಗಳನ್ನು ಸೋತು ಕೊನೆಯ ಸ್ಥಾನದಲ್ಲಿದೆ.

ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ವ್ಯಕ್ತಿಯ ಹೆಸರು ಬಹಿರಂಗಡಿಸಿಲ್ಲ. ಪಾಕಿಸ್ತಾನ ಕ್ರಿಕೆಟ್ ತಂಡ ನಿಷೇಧಿಸುವ ಜತೆಗೆ ಮುಖ್ಯ ಆಯ್ಕೆಗಾರ ಇಂಝಮಾಮ್ ಉಲ್ ಹಕ್ ನೇತೃತ್ವದ ಆಯ್ಕೆ ಸಮಿತಿಯನ್ನು ವಿಸರ್ಜಿಸಬೇಕು ಎಂದೂ ಆಗ್ರಹಿಸಿದ್ದಾಗಿ ಸಮಾ ಸುದ್ದಿವಾಹಿನಿ ವರದಿ ಮಾಡಿದೆ.
ಈ ಅರ್ಜಿಯ ಹಿನ್ನೆಲೆಯಲ್ಲಿ ಪಂಜಾಬ್ ಪ್ರಾಂತ್ಯದ ಗುಜ್ರನ್‌ವಾಲಾ ಸಿವಿಲ್ ನ್ಯಾಯಾಧೀಶರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬುಧವಾರ ಲಾಹೋರ್‌ನಲ್ಲಿ ಸಭೆ ಸೇರಲಿರುವ ಪಾಕ್ ಕ್ರಿಕೆಟ್ ಮಂಡಳಿ, ತಂಡದ ವ್ಯವಸ್ಥಾಪನೆಯಲ್ಲಿ ಭಾರಿ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ. ಆಯ್ಕೆದಾರರು, ಕೋಚ್ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಬದಲಿಸಲು ಪಿಸಿಬಿ ಮುಂದಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News