ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

Update: 2019-06-19 16:25 GMT

ಬೆಂಗಳೂರು, ಜೂ. 19: ಹೆಬ್ಬಾಳದ ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ)ದಲ್ಲಿನ ದುರಂತ ಸಂಬಂಧ ಈಗಾಗಲೇ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬುಧವಾರ ಘಟನಾ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ಸ್ಥಳ ಪರಿಶೀಲನೆ ಬಳಿಕ ಮಾತನಾಡಿದ ಅವರು, ಎಸ್‌ಟಿಪಿ ನಿರ್ಮಾಣದ ಹಂತದ ವೇಳೆ ಮೂವರು ಎಂಜಿನಿಯರ್‌ಗಳು ಸಾವನ್ನಪ್ಪಿರುವುದು ದುರದೃಷ್ಟಕರ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದರು.

ಹೆಬ್ಬಾಳದಲ್ಲಿ ನಿರ್ಮಾಣವಾಗುತ್ತಿರುವ ಎಸ್‌ಟಿಪಿ ಎರಡನೆ ಅತಿದೊಡ್ಡ ಎಸ್‌ಟಿಪಿ ಆಗಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿತ್ತು. ಈ ಅವಧಿಯಲ್ಲಿ ಇಂಥ ಘಟನೆ ಸಂಭವಿಸಿರುವುದು ಬೇಸರ ತಂದಿದೆ. ಈ ಘಟನೆಗೆ ಕಾರಣವೇನು ಎಂದು ತನಿಖೆಯಿಂದ ಗೊತ್ತಾಗಲಿದೆ ಎಂದರು.

ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಬೆಳಂದೂರು ಬಳಿಯ ಎಸ್‌ಟಿಪಿಯಿಂದ ನೀರು ಶುದ್ದೀಕರಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ಹೆಬ್ಬಾಳದಲ್ಲಿಯೂ ಮಾಡಲಾಗುತ್ತಿದ್ದು, ಇದಕ್ಕಾಗಿ 365 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು.

‘ಎಸ್‌ಟಿಪಿ ದುರಂತ ಘಟನೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಿಗಳ ಬೇಜವಾಬ್ದಾರಿ ನೀತಿಯನ್ನು ಸಹಿಸುವುದಿಲ್ಲ. ಘಟನೆಗೆ ಯಾರೇ ಕಾರಣಕರ್ತರಾದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆಗಳಿಂದ ಇಲಾಖೆಗೆ ಕೆಟ್ಟ ಹೆಸರು. ಅಧಿಕಾರಿಗಳು ಹೊಣೆಯನ್ನು ಅರಿತು ಕಾರ್ಯನಿರ್ವಹಿಸಬೇಕು’

-ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News