ಜೂ.27ರಂದು ಕೆಂಪೇಗೌಡ ಜಯಂತಿ ಆಚರಣೆ: ಡಾ.ಜಿ.ಪರಮೇಶ್ವರ್

Update: 2019-06-19 16:47 GMT

ಬೆಂಗಳೂರು, ಜೂ.19: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಈ ಬಾರಿ ಜೂ.27ರಂದು ಅದ್ಧೂರಿಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್‌ಗೆ ದಿಲ್ಲಿಯಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮ ಇದ್ದರಿಂದ ಸಭೆಯನ್ನು ನಾನೇ ನಡೆಸಿದ್ದೇನೆ. ಕಳೆದ ವರ್ಷ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಗಿತ್ತು. ಈ ಬಾರಿಯೂ ಸರಕಾರದ ವತಿಯಿಂದ ಜೂ.27 ರಂದು ಆಚರಿಸಲಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕೆ ಅಥವಾ ಬೇರೆ ಸ್ಥಳದಲ್ಲಿ ಆಚರಣೆ ಮಾಡಬೇಕೇ ಎಂಬುದರ ಬಗ್ಗೆ ಅಭಿಪ್ರಾಯ ಕೇಳಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದರು.

ಕೆಂಪೇಗೌಡ ಜಯಂತಿಯನ್ನು ಎಲ್ಲ ಜಿಲ್ಲೆಗಳಲ್ಲೂ ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ. ಅದಲ್ಲದೆ, ಎಲ್ಲ ಸರಕಾರಿ ಕಚೇರಿಗಳಲ್ಲಿ ಕೆಂಪೇಗೌಡರ ಭಾವಚಿತ್ರ, ರೇಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅವರ ಪ್ರತಿಮೆ ಪ್ರತಿಷ್ಠಾಪನೆ ಮಾಡುವುದು, ಶಾಲಾ ಪಠ್ಯ ಪುಸ್ತಕಗಳಲ್ಲಿ ಅವರ ಬಗ್ಗೆ ಮಾಹಿತಿ ಅಳವಡಿಸಬೇಕು ಎಂದು ಸಂಘ ಸಂಸ್ಥೆಯಿಂದ ಅಭಿಪ್ರಾಯ ಕೇಳಿ ಬಂದಿದೆ ಎಂದು ಪರಮೇಶ್ವರ್ ಹೇಳಿದರು. ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ಕೆಂಪೇಗೌಡರ ಹೆಸರಲ್ಲೂ ಪ್ರಶಸ್ತಿ ಕೊಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಕೆಂಪೇಗೌಡ ಜಯಂತಿಗೆ ನೋಂದಾಯಿತ ಸಂಘ ಸಂಸ್ಥೆಗಳಿಗೆ ಇಲಾಖೆಯಿಂದ ಖುದ್ದು ಆಮಂತ್ರಣ ಪತ್ರ ನೀಡಬೇಕು. ಜಯಂತಿ ಸಂಬಂಧ ಇಲಾಖೆಯು ವೆಬ್‌ಸೈಟ್‌ನಲ್ಲಿ ಸೂಕ್ತ ರೀತಿ ಮಾಹಿತಿ ನೀಡುವಂತೆಯೂ ಅಧಿಕಾರಿಗಳಿಗೆ ಸಭೆಯಲ್ಲಿ ಅವರು ಸೂಚಿಸಿದರು. ಸಭೆಯ ಪ್ರಾರಂಭದಲ್ಲಿ ಹಿರಿಯ ರಂಗಕರ್ಮಿ, ಕಲಾ ಪೋಷಕ ಡಿ.ಕೆ.ಚೌಟ ನಿಧನದ ಹಿನ್ನೆಲೆಯಲ್ಲಿ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News