ಉಡುಪಿ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ 5ನೇ ಅಂ.ರಾ.ಯೋಗ ದಿನಾಚರಣೆ

Update: 2019-06-19 17:12 GMT

ಉಡುಪಿ, ಜೂ.19: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಜೂ.21ರ ಶುಕ್ರವಾರ ಅಜ್ಜರಕಾಡಿನಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ.

ಯೋಗ ದಿನಾಚರಣೆಯ ಅಂಗವಾಗಿ ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 6:30ಕ್ಕೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಮೊದಲಿನ 45 ನಿಮಿಷಗಳ ಕಾಲ ಆಯುಷ್ ಮಂತ್ರಾಲಯದಿಂದ ನೀಡಲ್ಪಟ್ಟ ಯೋಗಾಸನಗಳ ಪ್ರಾತ್ಯಕ್ಷಿಕೆ ಪ್ರದರ್ಶನ, ಯೋಗ ನಡಿಗೆ ಮುಂತಾದ ಯೋಗದ ಬಗ್ಗೆ ಜಾಗೃತಿಯನ್ನು ಉಂಟು ಮಾಡುವ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಳೆದೊಂದು ವರ್ಷದಿಂದ ಜಿಲ್ಲಾ ಆಯುಷ್ ಆಸ್ಪತ್ರೆ ಆವರಣದಲ್ಲಿ ಆಸಕ್ತರಿಗೆ ಉಚಿತವಾಗಿ ಯೋಗ ತರಗತಿ ನಡೆಸುತ್ತಿರುವ ಲಲಿತಾ ಇವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಆಯುಷ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರೆಡ್‌ಕ್ರಾಸ್: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜೂ.21ರಂದು ಬೆಳಗ್ಗೆ 9:30ಕ್ಕೆ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಂಟ್ ಹಾಲ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಅಂಬಲಪಾಡಿ ಶ್ರೀಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಮ್ಯಾನೆಜಿಂಗ್ ಟ್ರಸ್ಟಿ ಡಾ. ಎನ್.ಬಿ. ವಿಜಯ ಬಲ್ಲಾಳ್ ಉದ್ಘಾಟಿಸುವರು. ಈ ಸಂದಭರ್ದಲ್ಲಿ ಉಡುಪಿ ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಧಿಕಾ ರವಿರಾಜ್ ಯೋಗ ತರಬೇತಿ ನೀಡುವರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಬಸ್ರೂರು ರಾಜೀವ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಡಾ. ಉಮೇಶ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News