ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲು ಸಿಎಂಗೆ ಪರಿಶಿಷ್ಟ ಶಾಸಕರ ಮನವಿ

Update: 2019-06-19 17:48 GMT

ಬೆಂಗಳೂರು, ಜೂ. 19: ಪರಿಶಿಷ್ಟ ಪಂಗಡ(ಎಸ್ಟಿ) ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವುದು ಸೇರಿದಂತೆ ಆ ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಎಸ್ಸಿ-ಎಸ್ಟಿ ಶಾಸಕರು ಮತ್ತು ಸಂಸದರ ಜತೆ ಸಭೆ ನಡೆಸಿದರು.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕುಮಾರಸ್ವಾಮಿ ತನ್ನ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ರಾಜೂಗೌಡ, ಎನ್.ವೈ.ಗೋಪಾಲಕೃಷ್ಣ, ನಾಗೇಂದ್ರ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪರಿಶೀಲಿಸಿ ಕ್ರಮ: ಪರಿಶಿಷ್ಟ ಪಂಗಡಕ್ಕೆ(ಎಸ್ಟಿ) ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಜನಸಂಖ್ಯೆಯನ್ನು ಆಧರಿಸಿ ಶೇ.7.5ರಷ್ಟು ಮೀಸಲಾತಿ ಕಲ್ಪಿಸಲು ಆಗ್ರಹವಿದೆ. ಈ ಬಗ್ಗೆ ರಾಜ್ಯ ಸರಕಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕುಮಾರಸ್ವಾಮಿ ಇದೇ ವೇಳೆ ಭರವಸೆ ನೀಡಿದರು.

ಸಭೆಯ ಬಳಿಕ ಮಾತನಾಡಿದ ಶಾಸಕ ರಾಜೂಗೌಡ, ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶೈಕ್ಷಣಿಕವಾಗಿ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಸಂಘಟನೆಗಳು ಮತ್ತು ಸ್ವಾಮೀಜಿಗಳ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಆರಂಭವಾಗಿದೆ. ರಾಜಕೀಯದಲ್ಲಿ ಸಮುದಾಯಕ್ಕೆ ಶೇ7.5ರಷ್ಟು ಮೀಸಲಾತಿ ಸಿಕ್ಕಿದೆ. ಅದೇ ರೀತಿಯಲ್ಲಿ ಶಿಕ್ಷಣ-ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ ಜೂ.25ಕ್ಕೆ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಆ ಹಿನ್ನೆಲೆಯಲ್ಲಿ ಸಿಎಂ ಸಭೆ ನಡೆಸಿದ್ದು, ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಜೂಗೌಡ ಹೇಳಿದರು.

ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.7.5ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರಕಾರ ನಿರ್ಧಾರ ಕೈಗೊಂಡಿದೆ. ಅದೇ ಮಾದರಿಯಲ್ಲೇ ರಾಜ್ಯ ಸರಕಾರ ನಮ್ಮ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ಸೂಕ್ತ ತೀರ್ಮಾನ ಕೈಗೊಳ್ಳಬೇಕು’

-ರಾಜೂಗೌಡ, ಬಿಜೆಪಿ ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News