ಕೈದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿರುವ ಬಗ್ಗೆ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2019-06-19 17:50 GMT

ಬೆಂಗಳೂರು, ಜೂ.19: ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಗ್ರಂಥಾಲಯದ ಸೌಕರ್ಯ, ವೈದ್ಯಕೀಯ ಸೇವೆ, ಆಹಾರದ ಗುಣಮಟ್ಟ, ಶೌಚಾಲಯ, ಸ್ನಾನಗೃಹಗಳು, ಮಹಿಳಾ ಕೈದಿಗಳಿಗೆ ಹೆರಿಗೆ ವ್ಯವಸ್ಥೆ ಹಾಗೂ ಮಕ್ಕಳಿಗೆ ಚಿಕಿತ್ಸೆ ನೀಡುವ ಕುರಿತಂತೆ ವಿವರವಾದ ವರದಿ ಸಲ್ಲಿಸಲು ಬುಧವಾರ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸರಕಾರದ ಪರ ವಾದಿಸಿದ ವಕೀಲರು, 2018ರಲ್ಲಿ ಮಾನಹ ಹಕ್ಕುಗಳ ಆಯೋಗವು ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಿದೆ. ಹಾಗೆಯೇ, ಬೀದರ್, ಹಾಸನ್ ಜಿಲ್ಲೆಗಳಲ್ಲಿ ಹೊಸ ಕಾರಾಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಹಳೆಯ ಕಾರಾಗೃಹಗಳಲ್ಲಿನ ಕೈದಿಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, 500 ಜನ ಸಾಮರ್ಥ್ಯ ಇರುವ ಒಂದು ಕಾರಾಗೃಹದಲ್ಲಿ 1 ಸಾವಿರ ಕೈದಿಗಳನ್ನು ಇರಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅಲ್ಲದೆ, ಕೈದಿಗಳ ಸಾವುಗಳು, ಆರೋಗ್ಯದಲ್ಲಿ ಏರುಪೇರು ಉಂಟಾಗುವುದಿಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿತು. ಕೈದಿಗಳ ಹಿತದೃಷ್ಟಿಯಿಂದ ಕೈಗೊಂಡಿರುವ ಮೂಲಭೂತ ಸೌಕರ್ಯಗಳ ಕುರಿತು ವಿವರವಾದ ವರದಿ ಸಲ್ಲಿಸಲು ನ್ಯಾಯಪೀಠವು ರಾಜ್ಯ ಸರಕಾರಕ್ಕೆ ಸೂಚಿಸಿ, ವಿಚಾಣೆಯನ್ನು ಜು.4ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News