ಶುದ್ಧ ಕುಡಿಯುವ ನೀರು ಪೂರೈಕೆಗೆ ‘ಜಲಧಾರೆ’ ಯೋಜನೆ: ಸಿಎಂ ಕುಮಾರಸ್ವಾಮಿ

Update: 2019-06-20 13:25 GMT

ಬೆಂಗಳೂರು, ಜೂ. 20: ರಾಜ್ಯದ ಎಲ್ಲ ಗ್ರಾಮಗಳಿಗೂ ನದಿ ಮೂಲದಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ‘ಜಲಧಾರೆ ಯೋಜನೆ’ಯನ್ನು ಶೀಘ್ರದಲ್ಲೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈತ್ರಿ ಸರಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ‘ಮೈತ್ರಿ ಪರ್ವ’ ಕಿರು ಹೊತ್ತಿಗೆ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.

ಮೈತ್ರಿ ಸರಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಗೆ 56 ಸಾವಿರ ಕೋಟಿ ರೂ. ಅಗತ್ಯವಿದ್ದು, ಈ ಬಗ್ಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದ ಅವರು, ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಶುದ್ಧ ನೀರು ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದರು.

ಅಲ್ಲದೆ, ನಗರದ ಅಭಿವೃದ್ಧಿಗಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಮುಂದಿನ ತಿಂಗಳು ಬೆಂಗಳೂರು ಮೆಟ್ರೊ ಪಾಲಿಟನ್ ಪ್ರಾಧಿಕಾರದ ಸಭೆ ಕರೆದು, ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಜನರ ವಿಶ್ವಾಸ ಗಳಿಕೆ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಆಗಿದೆ. ಆದರೆ, ಬಿಜೆಪಿಗೆ ಮತ ನೀಡಿದ ಜನ ‘ನಮ್ಮ ನಿರ್ಧಾರ ಸರಿಯಲ್ಲ’ ಎಂದು ಬೇಸರ ಮಾಡಿಕೊಳ್ಳುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶಾಶ್ವತ ಯೋಜನೆಗಳನ್ನು ರೂಪಿಸುವ ಮೂಲಕ ದೇಶದಲ್ಲೆ ಕರ್ನಾಟಕ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರುವ ಮೂಲಕ ಜನರ ವಿಶ್ವಾಸ ಗಳಿಸುತ್ತೇವೆ ಎಂದ ಅವರು, ಸಾಲಮನ್ನಾ ಮಾಡಿದ್ದರೂ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News