ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು: ಯೋಜನೆ ಕೈ ಬಿಡುವಂತೆ ಸಿಎಂಗೆ ಶಾಸಕ ಹಾಲಪ್ಪ ಆಗ್ರಹ

Update: 2019-06-20 16:26 GMT

ಬೆಂಗಳೂರು, ಜೂ.20: ಬೆಂಗಳೂರು ಜಲಮಂಡಳಿ ಸಹಯೋಗದಲ್ಲಿ ಶರಾವತಿ ನದಿಯ ಲಿಂಗನಮಕ್ಕಿ ಜಲಾಶಯದಿಂದ 30 ಟಿಎಂಸಿ ನೀರನ್ನು ಬೆಂಗಳೂರಿಗೆ ತರಲು ಮುಂದಾಗಿರುವ ರಾಜ್ಯ ಸರಕಾರ ಈ ಯೋಜನೆಯನ್ನು ಕೈ ಬಿಡಬೇಕು ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಎಚ್.ಹಾಲಪ್ಪ ಆಗ್ರಹಿಸಿದ್ದಾರೆ.

ಈ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಮಲೆನಾಡಿನ ಶರಾವತಿ ಜಲಾನಯನ ಪ್ರದೇಶಗಳಾದ ಸಾಗರ ಮತ್ತು ಹೊಸನಗರ ತಾಲೂಕಿನ ಸಾವಿರಾರು ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವದಿಂದ ನೂರಾರು ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದರು.

ಆ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕೇವಲ 30-40 ಕಿ.ಮೀ.ವ್ಯಾಪ್ತಿಯಲ್ಲಿರುವ ಹಳ್ಳಿಗಳಿಗೆ ನೀರು ಒದಗಿಸಲು ಸರಕಾರಕ್ಕೆ ಸಾಧ್ಯವಾಗಿಲ್ಲ. ಇನ್ನು 400 ಕಿ.ಮೀ.ದೂರವಿರುವ ಬೆಂಗಳೂರಿಗೆ ನೀರು ಒದಗಿಸುವ ಯೋಜನೆ ಕೈಗೆತ್ತಿಕೊಳ್ಳಲು ಮುಂದಾಗಿರುವುದು ಎಷ್ಟು ಸಮಂಜಸ ಎಂದು ಅವರು ಪ್ರಶ್ನಿಸಿದರು.

ಈ ಯೋಜನೆಯ ರೂಪುರೇಷೆಗಳೇನು, ಯಾವ ಮಾನದಂಡದಡಿಯಲ್ಲಿ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮತ್ತು ಯಾವ ಕಾರಣಕ್ಕೆ ಯೋಜನೆಯನ್ನು ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ವರದಿಯನ್ನು ಯಾರು ಸಿದ್ಧಪಡಿಸಿದ್ದಾರೆ ಎಂದು ಹಾಲಪ್ಪ ಪ್ರಶ್ನಿಸಿದರು.

ವರದಿಯ ಪೂರ್ಣ ಮಾಹಿತಿಯನ್ನು ಮತ್ತು ಇದಕ್ಕೆ ಸಂಬಂಧಿಸಿದ ಎಲ್ಲ ವಿವರಗಳನ್ನು ಸ್ಥಳೀಯ ಶಾಸಕನಾದ ನನಗೆ ನೀಡಬೇಕು ಹಾಗೂ ಈ ಯೋಜನೆಗೆ ಸಾರ್ವಜನಿಕರ ಹಾಗೂ ಪರಿಸರ ಪ್ರೇಮಿಗಳ ತೀವ್ರ ವಿರೋಧವಿದ್ದು, ಪ್ರಸ್ತುತ ಯೋಜನೆಯನ್ನು ಕೈ ಬಿಡಬೇಕು ಎಂದು ಅವರು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News