ಬಾರ್-ರೆಸ್ಟೋರೆಂಟ್‌ಗಳಿಂದ ಶಬ್ದ ಮಾಲಿನ್ಯ ಆರೋಪ: ಪ್ರಮಾಣ ಪತ್ರ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2019-06-20 17:02 GMT

ಬೆಂಗಳೂರು, ಜೂ.20: ನಗರದ ಇಂದಿರಾನಗರದಲ್ಲಿ ಜನವಸತಿ ಪ್ರದೇಶಗಳಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಂದ ಶಬ್ದ ಮಾಲಿನ್ಯ ಉಂಟಾಗುತ್ತಿರುವ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ನಗರದ ಹಿರಿಯ ಪೊಲೀಸ್ ಅಧಿಕಾರಿಯಿಂದ ಮುಚ್ಚಿದ ಲಕೋಟೆಯಲ್ಲಿ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.

ಈ ಕುರಿತು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯವನ್ನು ತಡೆಗಟ್ಟಲು ಕೋರಿ ಇಂದಿರಾನಗರದ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಇಂದಿರಾನಗರದಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳು ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ತೆರೆದಿರುತ್ತವೆ. ಇದರ ಮಧ್ಯೆ, ಸಂಗೀತದ ಮೂಲಕ ಶಬ್ದ ಮಾಲಿನ್ಯವನ್ನು ಉಂಟುಮಾಡುತ್ತವೆ. ಇದರಿಂದ, ಸ್ಥಳೀಯರಿಗೆ ತೊಂದರೆಯಾಗುತ್ತದೆ ಎಂದು ಪೀಠಕ್ಕೆ ತಿಳಿಸಿದರು.

ಪ್ರತಿವಾದಿಗಳ ಪರ ವಾದಿಸಿದ ವಕೀಲರು, ಇಂದಿರಾನಗರದ ಬಾಡ್ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲಿ ಯಾವುದೇ ಶಬ್ದ ಮಾಲಿನ್ಯ ಆಗದಂತೆ ಈಗಾಗಲೇ ತಡೆಗಟ್ಟಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಜನವಸತಿ ಪ್ರದೇಶಗಳಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಶಬ್ದ ಮಾಲಿನ್ಯ ಉಂಟು ಮಾಡಿದರೆ, ಸ್ಥಳೀಯರಿಗೆ ತೊಂದರೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದ ನ್ಯಾಯಪೀಠವು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಂದ ಸ್ಥಳೀಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಮುಚ್ಚಿದ ಲಕೋಟೆಯಲ್ಲಿ ಪ್ರಮಾಣ ಪತ್ರ ಸಲ್ಲಿಸಿ ಎಂದು ಸೂಚನೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News