ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್ ಆದೇಶ

Update: 2019-06-21 16:18 GMT

ಬೆಂಗಳೂರು, ಜೂ.21: ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಅಗ್ರಹಾರ ದಾಸರಹಳ್ಳಿ ನಿವಾಸಿ ಎಸ್.ರವಿಚಂದ್ರ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಎನ್.ಪಿ.ಅಮೃತೇಶ್ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಿದರೆ ದೂರು ದಾಖಲಿಸಿ ಎಂದು ಸುಪ್ರೀಂಕೋರ್ಟ್ ಈ ಹಿಂದೆಯೇ ಆದೇಶಿಸಿದೆ. ಆದರೆ, ಸುಪ್ರೀಂಕೋರ್ಟ್ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ನಿಟ್ಟಿನಲ್ಲಿ ಕೋರ್ಟ್ ಮೇಲುಸ್ತುವಾರಿಯಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮುಂದಾಗಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ಆದೇಶ ಹೊರಡಿಸಿತು.

2006ರ ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ: ಸಾರ್ವಜನಿಕ ಸ್ಥಳಗಳಲ್ಲಿ ಮಸೀದಿ, ದೇವಸ್ಥಾನ, ಚರ್ಚ್ ಹಾಗೂ ಗುರುದ್ವಾರ ಸೇರಿದಂತೆ ಅನಧಿಕೃತವಾಗಿ ಯಾವುದೇ ರೀತಿಯ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ನಿರ್ಮಿಸಬಾರದು. ನಿರ್ಮಿಸಿದರೆ ಅವುಗಳನ್ನು ತೆರವುಗೊಳಿಸಬೇಕು. 2006ರಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಸಂಬಂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News