×
Ad

ಪಶ್ಚಿಮಬಂಗಾಳ ಘರ್ಷಣೆ: 16 ಮಂದಿಯ ಬಂಧನ, ನಿಷೇಧಾಜ್ಞೆ ಜಾರಿ

Update: 2019-06-21 23:33 IST

ಕೋಲ್ಕತಾ, ಜೂ. 21: ಎರಡು ಗುಂಪುಗಳ ನಡುವೆ ಘರ್ಷಣೆಗೆ ಸಂಭವಿಸಿದ ಪಶ್ಚಿಮಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಭಾಟ್‌ಪಾರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಲಾಗಿದೆ.

ಘರ್ಷಣೆಗೆ ಸಂಬಂಧಿಸಿದಂತೆ 16ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟಿಎಂಸಿ ಹಾಗೂ ಬಿಜೆಪಿಗೆ ಸೇರಿದವರು ಎಂದು ಶಂಕಿಸಲಾದ ಎರಡು ಗುಂಪುಗಳ ನಡುವೆ ಗುರುವಾರ ನಡೆದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದರು ಹಾಗೂ 11 ಮಂದಿ ಗಾಯಗೊಂಡಿದ್ದರು. ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಜ್ಯಪಾಲ ಕೆ.ಎನ್. ತ್ರಿಪಾಠಿ, ಭಾಟ್‌ಪಾರ ಮಾತ್ರವಲ್ಲ, ಸಂಪೂರ್ಣ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದಿದ್ದಾರೆ.

 ಭಾಟ್‌ಪಾರ, ಜಗದ್ದಲ್ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಅಂತಾರ್ಜಾಲ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಈ ಪ್ರದೇಶದಲ್ಲಿ ಗುರುವಾರ ರಾತ್ರಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಶುಕ್ರವಾರ ಬೆಳಗ್ಗೆ ಇದೇ ಪ್ರದೇಶದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಬೈಕ್‌ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಕಚ್ಛಾ ಬಾಂಬ್ ಎಸೆದು, ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News