ಸರಕಾರಿ ಶಾಲೆಗಳ ಉನ್ನತೀಕರಣ: ಆರ್.ರೋಷನ್‌ ಬೇಗ್

Update: 2019-06-24 13:28 GMT

ಬೆಂಗಳೂರು, ಜೂ.24: ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಮಾದರಿಯಲ್ಲಿ ಉನ್ನತೀಕರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಆರ್.ರೋಷನ್ ಬೇಗ್ ಹೇಳಿದ್ದಾರೆ.

ಸೋಮವಾರ ವಸಂತ ನಗರದಲ್ಲಿರುವ ಸರಕಾರಿ ಕನ್ನಡ ಹಾಗೂ ತಮಿಳು ಮಾದರಿ ಶಾಲೆಯ ನೂತನ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಸರಕಾರಿ ಶಾಲೆಯಿಂದಲೇ ವಿದ್ಯಾಭ್ಯಾಸ ಮಾಡಿಕೊಂಡು ಬಂದವನು. ಹೀಗಾಗಿ, ಉನ್ನತ ಮಟ್ಟದಲ್ಲಿ ಸರಕಾರಿ ಶಾಲೆಗಳನ್ನು ತೆಗೆದುಕೊಂಡು ಹೋಗಲು ಸರಕಾರದ ಜತೆ ನಿರಂತರಕೊಂಡಿಯಾಗಿರುವೆ ಎಂದರು.

ಸರಕಾರಿ ಶಾಲೆಗಳ ಸಮೀಪವೇ ಖಾಸಗಿ ಶಾಲೆಗಳು ತಲೆ ಎತ್ತುತ್ತಿವೆ. ಇದರಿಂದ ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಆರೋಪವಿದೆ. ಇದನ್ನು ದೂರ ಮಾಡುವ ಸಲುವಾಗಿ ಸರಕಾರಿ ಶಾಲೆಗಳನ್ನು ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಳಸಿ ಎಲ್ಲೆಡೆ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ತಿಳಿಸಿದರು.

ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಸರಕಾರದ ಜತೆಗೆ ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಘಟನೆಗಳು ಹಾಗೂ ಹಳೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡುವುದು ಅತ್ಯಗತ್ಯ. ಅಭಿವೃದ್ಧಿ ಎಂಬುದು ಒಬ್ಬರಿಂದ ಸಾಧ್ಯವಿಲ್ಲ. ಎಲ್ಲರೂ ಕೈಜೋಡಿಸಿದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂದು ಹೇಳಿದರು.

ಅನೇಕ ಕಡೆಗಳಲ್ಲಿ ಸ್ವಯಂ ಪ್ರೇರಿತವಾಗಿ ಅನೇಕ ಸಂಸ್ಥೆಗಳು ಶಾಲಾ ಕಟ್ಟಡಗಳ ದುರಸ್ತಿ, ಹೊಸ ಕೊಠಡಿಗಳ ನಿರ್ಮಾಣ, ಪಾಠೋಪಕರಣಗಳು ಹಾಗೂ ಪೀಠೋಪಕರಣಗಳ ಕೊಡುಗೆ ನೀಡಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ವಿದ್ಯಾರ್ಥಿಗಳನ್ನು ದತ್ತು ಪಡೆದುಕೊಂಡು ಅವರಿಗೆ ಆರ್ಥಿಕ ಸಹಾಯ ಮಾಡುವುದರ ಮೂಲಕ ಶೈಕ್ಷಣಿಕವಾಗಿ ಬೆಳೆಯಲು ಬೆಂಬಲ ನೀಡುತ್ತಿದ್ದಾರೆ. ಆದರೂ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಣ ಕೇಂದ್ರಗಳು ಅಭಿವೃದ್ಧಿಯಾಗಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ವಸಂತನಗರ ಪಾಲಿಕೆ ಸದಸ್ಯ ಸಂಪತ್ ಮಾತನಾಡಿ, ಸರಕಾರಿ ಶಾಲೆಗಳಿಂದ ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ಸಿಗುತ್ತದೆ. ಬಡಮಕ್ಕಳಿಗೆ ಸಾಕಷ್ಟು ಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡಬಹುದಾಗಿದೆ. ಅಲ್ಲದೆ, ಮಕ್ಕಳನ್ನು ಪ್ರಜ್ಞಾವಂತರನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರವೂ ಬಹಳ ಮುಖ್ಯವಾದುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಸುರೇಶ್ ಹರಿ, ಧಕೋಜು, ರವಿಶಂಕರ್, ವಿಶ್ವನಾಥ್ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News