ಐಎಂಎ ವಂಚನೆ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Update: 2019-06-24 14:22 GMT

ಬೆಂಗಳೂರು, ಜೂ. 24: ಬಹುಕೋಟಿ ಐ ಮಾನಿಟರಿ ಅಡ್ವೈಸರಿ(ಐಎಂಎ) ಕಂಪೆನಿ ವಂಚನೆ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಡಾ. ಅಶ್ವತ್ಥ್ ನಾರಾಯಣ್ ಇಂದಿಲ್ಲಿ ಆಗ್ರಹಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿನ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಐಎಂಎ ಮಾಲಕ ಮನ್ಸೂರ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಪ್ರಭಾವಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಹೀಗಾಗಿ ಪ್ರಕರಣದ ಸಮಗ್ರ ತನಿಖೆ ದೃಷ್ಟಿಯಿಂದ ಸಿಬಿಐ, ಇಡಿ ತನಿಖೆ ಅಗತ್ಯವಿದೆ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಈ ಪ್ರಕರಣದ ಸಾಕ್ಷ್ಯಾಧಾರಗಳನ್ನು ನಾಶಪಡಿಸಲೆಂದೆ ಈ ಹಗರಣ ಕುರಿತು ಸಿಟ್ ತನಿಖಾ ತಂಡ ರಚಿಸಿದ್ದು, ಈ ತನಿಖೆಯಿಂದ ಸತ್ಯಾಂಶ ಬೆಳಕಿಗೆ ಬರಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಮಾಜಿ ಸಿಎಂ, ಸಚಿವರು, ಅಧಿಕಾರಿಗಳು ಕುಮ್ಮಕ್ಕು ನೀಡಿದ್ದಾರೆಂದು ದೂರಿದರು.

ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್‌ನನ್ನು ವಿಚಾರಣೆಗಾಗಿ ಸಿಟ್ ಕರೆಸಿದಾಗಲೂ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಂಡಿಲ್ಲ. ಈ ಸಂಸ್ಥೆಯ ಅವ್ಯವಹಾರದ ಬಗ್ಗೆ ಆರ್‌ಬಿಐ ಮುನ್ನೆಚ್ಚರಿಕೆ ನೀಡಿದ್ದರೂ ರಾಜ್ಯ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಅವರ ವಾಗ್ದಾಳಿ ನಡೆಸಿದರು.

ಕಂದಾಯ, ಕಾನೂನು ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರದಿಂದಲೇ ಮನ್ಸೂರ್, ಸಾರ್ವಜನಿಕರಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಲು ಸಾಧ್ಯವಾಗಿದೆ. ಅಲ್ಲದೆ, ಆ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಅವರು, ಸಿಟ್ ತನಿಖೆಯಿಂದ ಹಣ ಕಳೆದುಕೊಂಡ ಮುಗ್ದ ಜನರಿಗೆ ಯಾವುದೇ ಕಾರಣಕ್ಕೂ ನ್ಯಾಯ ಸಿಗುವುದಿಲ್ಲ ಎಂದು ಹೇಳಿದರು.

ಹೂಡಿಕೆದಾರ ಸಂಸ್ಥೆಯಾದ ಐಎಂಎ, ಹಲವು ವರ್ಷಗಳಿಂದ ಆದಾಯ ತೆರಿಗೆ ಪಾವತಿಸಿಲ್ಲ. ಇದೆಲ್ಲವೂ ಗೊತ್ತಿದ್ದರೂ ರಾಜ್ಯ ಸರಕಾರ ಮೌನ ವಹಿಸಿದ್ದೇಕೆ ಎಂದು ಪ್ರಶ್ನಿಸಿದ ಅಶ್ವತ್ಥ್ ನಾರಾಯಣ್, ಈವರೆಗೂ ಮನ್ಸೂರ್ ಎಲ್ಲಿದ್ದಾನೆಂಬುದನ್ನು ರಾಜ್ಯ ಸರಕಾರ ಪತ್ತೆ ಮಾಡಿಲ್ಲ ಎಂದು ಟೀಕಿಸಿದರು. ಬಿಜೆಪಿ ಮಾಧ್ಯಮ ಪ್ರಮುಖ ಪ್ರಕಾಶ್, ಕಾನೂನು ವಿಭಾಗದ ವಿವೇಕ್ ಸುಬ್ಬಾರೆಡ್ಡಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News