ಜೂ.26 ರಂದು ಅಭ್ಯರ್ಥಿಗಳು-ಪ್ರಮುಖ ನಾಯಕರ ಸಭೆ: ದಿನೇಶ್ ಗುಂಡೂರಾವ್

Update: 2019-06-24 16:16 GMT

ಬೆಂಗಳೂರು, ಜೂ.24: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರೀಕ್ಷಿತ ಯಶಸ್ಸು ಗಳಿಸಲು ಸಾಧ್ಯವಾಗದಿದ್ದಕ್ಕೆ ಕಾರಣಗಳೇನು ಎಂಬುದರ ಕುರಿತು ಚರ್ಚಿಸಲು ಜೂ.26ರಂದು 21 ಕ್ಷೇತ್ರಗಳ ಅಭ್ಯರ್ಥಿಗಳು ಹಾಗೂ ಪಕ್ಷದ ಪ್ರಮುಖ ನಾಯಕರ ಸಭೆಯನ್ನು ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೂ.26ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆಯ ನಮ್ಮ ಅಭ್ಯರ್ಥಿಗಳು ಹಾಗೂ ಹಿರಿಯ ನಾಯಕರೊಂದಿಗೆ ಈ ಚುನಾವಣೆಯ ಫಲಿತಾಂಶ, ಮುಂದಿನ ದಿನಗಳಲ್ಲಿ ಪಕ್ಷವನ್ನು ಯಾವ ರೀತಿಯಲ್ಲಿ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ನಿಗಮ-ಮಂಡಳಿಗಳಲ್ಲಿ ನಮ್ಮ ಕಾರ್ಯಕರ್ತರನ್ನು ನಿರ್ದೇಶಕ, ಸದಸ್ಯರನ್ನಾಗಿ ನೇಮಕ ಮಾಡಬೇಕಿದೆ. ಈ ಬಗ್ಗೆಯೂ ಅಂದು ಚರ್ಚಿಸಲಾಗುವುದು. ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಲು ಮಾಜಿ ಸಚಿವ ಬಸವರಾಜ ರಾಯರಡ್ಡಿ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ವೀರಕುಮಾರ್ ಪಾಟೀಲ್, ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರನ್ನು ಒಳಗೊಂಡ ಸಮಿತಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ ಕೆಪಿಸಿಸಿಗೆ ವರದಿ ನೀಡಲಿದ್ದಾರೆ ಎಂದು ಅವರು ಹೇಳಿದರು.

ಅನಾವಶ್ಯಕವಾಗಿ ಕೆಲವರು ಹೇಳಿಕೆಗಳನ್ನು ನೀಡುತ್ತಾರೆ. ನಿಜವಾಗಿಯೂ ಇಂತಹ ಫಲಿತಾಂಶ ಬರಲು ಕಾರಣವೇನು? ಲೋಕಸಭೆ ಚುನಾವಣೆ ಮುಗಿದ ಒಂದು ವಾರದ ಬಳಿಕ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮಗೆ ಶೇ.42ರಷ್ಟು ಮತಗಳು ಬಂದಿವೆ. ಬಿಜೆಪಿಗೆ ಶೇ.29ರಷ್ಟು ಮತಗಳು ಬಂದಿವೆ. ಆದರೆ, ಲೋಕಸಭಾ ಚುನಾವಣೆ ವೇಳೆ ನಮಗೆ ಮತಗಳು ಕಡಿಮೆ ಪ್ರಮಾಣದಲ್ಲಿ ಬರಲು ಕಾರಣವೇನು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅವರು ಹೇಳಿದರು. ನಮ್ಮ ಸರಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲರೂ ಒಟ್ಟಿಗಿದ್ದೇವೆ. ಉಪ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಮುಂದಿನ ತಿಂಗಳು ಬಜೆಟ್ ಅಧಿವೇಶನ ನಡೆಯಲಿದೆ. ಸರಕಾರ ಸ್ಥಿರವಾಗಿದ್ದರೂ ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

20 ತಿಂಗಳ ಬಳಿಕ ಸಂಪುಟ ಪುನರ್ರಚನೆ ಮಾಡುತ್ತೇವೆ ಎಂದು ಈ ಹಿಂದೆಯೇ ಹೇಳಿದ್ದೇವೆ. ಆಗ ಯಾವ ಯಾವ ಸಚಿವರು ಹೇಗೆ ಕೆಲಸ ಮಾಡಿದ್ದಾರೆ ಎಂಬುದರ ಕುರಿತು ವಿಮರ್ಶೆ ಮಾಡುತ್ತೇವೆ. ಈಗ ಎಲ್ಲ ಸಚಿವರಿಗೆ ಪ್ರವಾಸ ಕೈಗೊಂಡು, ಆಡಳಿತ ವ್ಯವಸ್ಥೆಯನ್ನು ಚುರಾಕಾಗಿಡುವಂತೆ ಸೂಚನೆ ನೀಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆ ನಡೆಸಲು ಇವತ್ತು ಮುಖಂಡರ ಸಭೆಯನ್ನು ಕರೆಯಲಾಗಿತ್ತು. ಪೌರ ಸಂಸ್ಥೆಗಳಲ್ಲಿ 1500ಕ್ಕಿಂತ ಹೆಚ್ಚಿನ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಗೆದ್ದಿದ್ದಾರೆ. ಅವರಿಗೆಲ್ಲ ಜುಲೈ 14ರಂದು ಅಭಿನಂದನಾ ಸಮಾರಂಭ ಏರ್ಪಡಿಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ಸಭೆಯಲ್ಲಿ ಕೇಂದ್ರದ ಮಾಜಿ ಸಚಿವರಾದ ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸಚಿವ ಶಿವಶಂಕರ ರೆಡ್ಡಿ, ಶಾಸಕರಾದ ಕೆ.ಸುಧಾಕರ್, ವಿ.ಮುನಿಯಪ್ಪ, ಸುಬ್ಬಾರೆಡ್ಡಿ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News