ಜೂ.26ಕ್ಕೆ ರಾಯಚೂರಿನ ಕರೇಗುಡ್ಡದಲ್ಲಿ ಸಿಎಂ ಗ್ರಾಮ ವಾಸ್ತವ್ಯ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

Update: 2019-06-24 16:59 GMT

ಬೆಂಗಳೂರು, ಜೂ. 24: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮದಲ್ಲಿ ಜೂ.26ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.26ರ ಬೆಳಗ್ಗೆ ರಾಯಚೂರಿಗೆ ಆಗಮಿಸಿ ಸಾರಿಗೆ ಬಸ್ ಮೂಲಕ ಕರೇಗುಡ್ಡ ಗ್ರಾಮಕ್ಕೆ ತೆರಳಲಿದ್ದು, ಕರೇಗುಡ್ಡ ಗ್ರಾಮದಲ್ಲಿ ಸಮಾರಂಭದ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳು ಹೆಚ್ಚಾಗಿ ಆಗಮಿಸಲಿದ್ದು ಅವರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತದಿಂದ 14 ಕೌಂಟರ್ ತೆರೆಯಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಮೊದಲೇ ಟೋಕನ್ ನೀಡಲಾಗುತ್ತಿದೆ. ಆ ಸಂಖ್ಯೆಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಮಹಿಳೆ, ವೃದ್ಧರು ಹಾಗೂ ವಿಕಲಚೇತನರಿಗಾಗಿ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಕಾರ್ಯಕ್ರಮಕ್ಕೆ 15 ಸಾವಿರಕ್ಕಿಂತ ಹೆಚ್ಚು ಜನ ಬರಲಿದ್ದು ಇವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸವಲತ್ತುಗಳ ವಿತರಣೆ ಕಾರ್ಯಕ್ರಮವೂ ಜರುಗಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಅನಂತರ ಸಿಎಂ ಕುಮಾರಸ್ವಾಮಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂ.27ರ ಬೆಳಗ್ಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News