ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಸಂಖ್ಯೆ ಹೆಚ್ಚಳ: ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್

Update: 2019-06-25 16:02 GMT

ಬೆಂಗಳೂರು, ಜೂ.25: ರಾಜ್ಯದಲ್ಲಿ ಬಡವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರಕಾರ ಒಂದು ಸಾವಿರ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗಿದ್ದು, ಸಾರ್ವಜನಿಕರಿಂದ ಈ ಶಾಲೆಗಳಿಗೆ ಹೆಚ್ಚಿನ ಬೇಡಿಕೆಯಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿ ಜೊತೆ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಮತ್ತಷ್ಟು ಆಂಗ್ಲ ಮಾಧ್ಯಮ ಸರಕಾರಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವುದರಿಂದ ಕನ್ನಡ ಶಾಲೆಗಳಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿನ ಬಡವರ ಮಕ್ಕಳು ಕೂಡ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬುದು ನಮ್ಮ ಸರಕಾರದ ಉದ್ದೇಶ ಎಂದು ಶ್ರೀನಿವಾಸ್ ಹೇಳಿದರು.

ಪ್ರತಿ ವರ್ಷ ತಾಲೂಕು ಮಟ್ಟದಲ್ಲಿ 20-30 ಕನ್ನಡ ಶಾಲೆಗಳು ಮುಚ್ಚುತ್ತಿವೆ. ಆದುದರಿಂದ, ಸರಕಾರದ ವತಿಯಿಂದಲೇ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುವುದರ ಜೊತೆಗೆ, ಕನ್ನಡ ಶಾಲೆಗಳಿಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಅಲ್ಲಿಯೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದು ಅವರು ತಿಳಿಸಿದರು.

ಸರಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಖಾಸಗಿ ಸಂಸ್ಥೆಗಳು, ಕಂಪೆನಿಗಳ ಸಹಕಾರ ಪಡೆದುಕೊಳ್ಳಲು ಉದ್ದೇಶಿಸಿದ್ದು, ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್ ಫಂಡ್)ಯನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವಂತೆ ಅವರ ಜೊತೆ ಚರ್ಚೆ ನಡೆಸಲಾಗುವುದು ಎಂದು ಶ್ರೀನಿವಾಸ್ ಹೇಳಿದರು.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿರುವ ಕೆಲವು ನ್ಯೂನತೆಗಳನ್ನು ಸರಿಪಡಿಸಲಾಗುವುದು. ಜೊತೆಗೆ ಕೆಪಿಎಸ್ಸಿ ಮೂಲಕ ನಡೆದ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಕರು ಹೆಚ್ಚಿನ ಪ್ರಮಾಣದಲ್ಲಿ ಆಯ್ಕೆಯಾಗಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಈ ನಿಟ್ಟಿನಲ್ಲಿಯೂ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿರುವ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ಒಂದು ವಿಷಯವಾಗಿ ಕಲಿಸುವುದು ಕಡ್ಡಾಯ. ಯಾವ ಶಾಲೆಗಳು ಈ ನಿಯಮವನ್ನು ಪಾಲಿಸುವುದಿಲ್ಲವೋ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ, ಕನ್ನಡ ಕಲಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧವು ಕ್ರಮ ಕೈಗೊಳ್ಳುವುದಾಗಿ ಶ್ರೀನಿವಾಸ್ ಎಚ್ಚರಿಕೆ ನೀಡಿದರು.

ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳಲ್ಲಿ ಕನ್ನಡವನ್ನು ಕಲಿಸಲಾಗುತ್ತಿದೆಯೋ ಇಲ್ಲವೋ ಎಂಬುದರ ಬಗ್ಗೆ ಪರಿಶೀಲನೆ ಮಾಡಲು ತಾನು ಶೀಘ್ರವೇ ಜಿಲ್ಲಾ ಮಟ್ಟದಲ್ಲಿ ಪ್ರವಾಸ ಕೈಗೊಂಡು ಪರಿಶೀಲನೆ ಮಾಡುತ್ತೇನೆ ಎಂದು ಅವರು ಹೇಳಿದರು.

ಬೇಸರವಿಲ್ಲ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನನ್ನ ಮೇಲೆ ವಿಶ್ವಾಸವಿಟ್ಟು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನು ವಹಿಸಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬರದ ರೀತಿಯಲ್ಲಿ ನಡೆದುಕೊಳ್ಳುತ್ತೇನೆ. ಅಲ್ಲದೇ, ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ನನ್ನ ಖಾತೆಯನ್ನು ಬದಲಾಯಿಸಿದಕ್ಕಾಗಿ ನನಗೆ ಯಾವುದೇ ಬೇಸರವಿಲ್ಲ.

-ಎಸ್.ಆರ್.ಶ್ರೀನಿವಾಸ್, ಶಿಕ್ಷಣ ಸಚಿವ

ಕನ್ನಡ ಕಡ್ಡಾಯ

ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ ಒಂದು ಭಾಷೆಯಾಗಿ ಕನ್ನಡವನ್ನು ಕಡ್ಡಾಯವಾಗಿ ಕಲಿಸಬೇಕು. ಇದರಲ್ಲಿ ಲೋಪವೇನಾದರೂ ಕಂಡುಬಂದರೆ ಆಯಾ ಭಾಗದ ಬಿಇಒ ಮತ್ತು ಡಿಡಿಪಿಐಗಳನ್ನೇ ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

-ಎಸ್.ಆರ್.ಶ್ರೀನಿವಾಸ್, ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News