ಸಾರ್ವಜನಿಕವಾಗಿ ಧೂಮಪಾನ: ದಂಡ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ

Update: 2019-06-25 16:03 GMT

ಬೆಂಗಳೂರು, ಜೂ.25: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ ವಿಧಿಸುವ ದಂಡವನ್ನು ರೂ.200 ರಿಂದ 1 ಸಾವಿರ ರೂ.ಗಳಿಗೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿ.ಅನಿತ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಗಳ ಕಛೇರಿ ಸಭಾಂಗಣದಲ್ಲಿ ಕೋಟ್ಪಾ-2003 ರ ಕಾನೂನು ಅನುಷ್ಠಾನ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದುವ ಯಾವುದೇ ವ್ಯಕ್ತಿಗೆ 200 ರೂ.ಗಳ ದಂಡವನ್ನು ಅಧಿಕಾರಿಗಳು ಸ್ಥಳದಲ್ಲೇ ವಿಧಿಸಬಹುದು ಎಂದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾನೂನು ಕಾಯ್ದೆಯಡಿಯಲ್ಲಿ ಜೂನ್ ತಿಂಗಳಿನಲ್ಲಿ 228 ಪ್ರಕರಣಗಳು ದಾಖಲಾಗಿದ್ದು, 45,600 ಗಳ ದಂಡವನ್ನು ವಸೂಲಿ ಮಾಡಲಾಗಿದೆ ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆ್ಯಪ್ ವ್ಯವಸ್ಥೆಯನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿನ ತಾಲೂಕು ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ತಹಶೀಲ್ದಾರ್ ನೇತೃತ್ವದಲ್ಲಿ ಪ್ರತಿ ತಿಂಗಳು ತಾಲ್ಲೂಕುವಾರು ತನಿಖಾ ತಂಡದ ಸಭೆ ನಡೆಸುವುದು ಕಡ್ಡಾಯವಾಗಿದೆ. ಸಭೆಯಲ್ಲಿ ದಾಳಿಗೆ ದಿನಾಂಕ ನಿಗಧಿಪಡಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News