ಖಾಸಗಿ ಟಿವಿ ಚಾನಲ್‌ಗಳ ನಿಯಂತ್ರಣಕ್ಕೆ ಪಿಐಎಲ್: ಮುಖ್ಯ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

Update: 2019-06-25 16:24 GMT

ಬೆಂಗಳೂರು, ಜೂ.25: ಖಾಸಗಿ ಟಿವಿ ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬುದರ ಕುರಿತು ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್.ಮೋಹನ್ ಅವರು, ಖಾಸಗಿ ಟಿ.ವಿ.ಚಾನಲ್ ಕಾರ್ಯಕ್ರಮಗಳ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕೆಂದು 2018ರ ಫೆ.19ರಂದು ಕೇಂದ್ರ ಸರಕಾರವು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆ1995ರ ಅಡಿಯಲ್ಲಿ ಎಲ್ಲ ರಾಜ್ಯಗಳಿಗೆ ನಿರ್ದೇಶಿಸಿದೆ. ಆದರೆ, ರಾಜ್ಯ ಸರಕಾರವು ಇಲ್ಲಿಯವರೆಗೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿಲ್ಲ ಎಂದು ಪೀಠಕ್ಕೆ ವಿವರಿಸಿದರು.

ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಅರ್ಜಿದಾರರು 2018ರ ನ.19ರಂದು ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಪೀಠಕ್ಕೆ ವಿವರಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ನಿರ್ದೇಶಿಸಿ, ವಿಚಾರಣೆಯನ್ನು ಜು.2ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News