ಕಾಂಗ್ರೆಸ್ ನಾಯಕರ ಮಾತಿನಿಂದಾಗಿ ಸಾಕಷ್ಟು ನೋವು ಅನುಭವಿಸಿದ್ದೇನೆ: ಎಚ್.ಡಿ.ದೇವೇಗೌಡ
ಬೆಂಗಳೂರು, ಜೂ.28: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯನ್ನು ಪರಿಶಿಷ್ಟ ಜಾತಿಗೆ ನೀಡಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.
ಜೆಪಿ ಭವನದಲ್ಲಿ ಜೆಡಿಎಸ್ ಹಿಂದುಳಿದ ವರ್ಗಗಳ ಸಭೆಯಲ್ಲಿ ಮಾತನಾಡಿದ ಅವರು, ಜು.11, 12 ರಂದು ಅರಮನೆ ಮೈದಾನದಲ್ಲಿ ಪರಿಶಿಷ್ಟ ಸಮುದಾಯದ ಸಮಾವೇಶ ಮಾಡುತ್ತೇನೆ. ಅಲ್ಲಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು
ಜೆಡಿಎಸ್ ಸಹವಾಸ ಮಾಡಿದ್ದರಿಂದ ಕಾಂಗ್ರೆಸ್‌ಗೆ ಸೋಲಾಗಿದೆ ಎಂಬ ಕೆಲ ಕಾಂಗ್ರೆಸ್ ನಾಯಕರು ಮಾತುಗಳು ಸರಿಯಲ್ಲ. ಇವರ ಮಾತಿನಿಂದಾಗಿ ಸಾಕಷ್ಟು ನೋವು ಅನುಭವಿಸಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿ ಪಡಿಸುತ್ತಿರುವುದು ಸರಿಯಲ್ಲ. ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಹಾಗೆಲ್ಲ ಮಾಡಬಾರದು. ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ವಿಫಲಗೊಳಿಸುವುದಕ್ಕಾಗಿಯೆ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.