ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಕುಮಾರಸ್ವಾಮಿ ?
Update: 2019-06-28 22:59 IST
ಬೆಂಗಳೂರು, ಜೂ.28: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಸಮುದಾಯದ ಮುಖಂಡ ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಶುಕ್ರವಾರ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ, ಎಚ್.ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತ ನಾಯಕರಿಗೆ ಕೊಡಲು ಒಮ್ಮತದ ಅಭಿಪ್ರಾಯ ಮೂಡಿ ಬಂದಿದೆ ಎನ್ನಲಾಗಿದೆ.
ಸಭೆಯಲ್ಲಿ ಮಾಜಿ ಶಾಸಕ ಬಿ.ಬಿ.ನಿಂಗಯ್ಯ, ಬಿ.ಎಂ.ಫಾರೂಖ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್‌ನ ಹಿಂದುಳಿದ ವರ್ಗಗಳ ಹಲವು ನಾಯಕರು ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.