×
Ad

ಕನ್ನಡ ನಿರ್ಲಕ್ಷಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಎಸ್.ಆರ್.ಶ್ರೀನಿವಾಸ್

Update: 2019-06-29 20:45 IST

ಬೆಂಗಳೂರು, ಜೂ.29: ರಾಜ್ಯದಲ್ಲಿ ಸಿಬಿಎಸ್ಸಿ, ಐಸಿಎಸ್ಸಿ ಹಾಗೂ ಅಂತರ್‌ರಾಷ್ಟ್ರೀಯ ಶಾಲೆಗಳಲ್ಲಿ ಒಂದು ಭಾಷೆಯಾಗಿ ಕನ್ನಡವನ್ನು ಕಲಿಸಬೇಕು. ಕನ್ನಡವನ್ನು ನಿರ್ಲಕ್ಷಿಸುವ ಶಾಲೆಗಳ ವಿರುದ್ಧ ನಾವು ಕಠಿಣ ನಿಲುವು ಕೈಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಶನಿವಾರ ನಗರದ ನೃಪತುಂಗ ರಸ್ತೆಯಲ್ಲಿರುವ ಸರ್ವ ಶಿಕ್ಷಣ ಅಭಿಯಾನದ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಶೇ.97ರಷ್ಟು ಸರಕಾರಿ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಉಳಿದ ಶಾಲೆಗಳಿಗೆ ಶೀಘ್ರವೇ ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡಲು ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಬಹಳಷ್ಟು ಶಾಲೆಗಳಿಗೆ ಅನುದಾನ ನೀಡಲಾಗಿದ್ದು, ಹಂತಹಂತವಾಗಿ ಎಲ್ಲ ಶಾಲೆಗಳಿಗೂ ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಎರಡು ವಿಭಾಗಗಳಲ್ಲಿನ ಶಾಲಾ ಮಕ್ಕಳಿಗೆ ಸಮವಸ್ತ್ರವನ್ನು ಸಂಪೂರ್ಣವಾಗಿ ವಿತರಣೆ ಮಾಡಲಾಗಿದ್ದು, ಉಳಿದಂತೆ ಮುಂದಿನ ದಿನಗಳಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಶ್ರೀನಿವಾಸ್ ತಿಳಿಸಿದರು.

ಗ್ರಂಥಾಲಯ ಇಲಾಖೆಯನ್ನು ಬಲಪಡಿಸುವ ದೃಷ್ಟಿಯಿಂದ ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ತುಂಬುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಕೆಪಿಎಸ್ಸಿ ಮೂಲಕ ನೇಮಕಾತಿ ಮಾಡಿಕೊಳ್ಳುವುದು ವಿಳಂಬವಾಗುವ ದೃಷ್ಟಿಯಿಂದ ನೇರ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಹಾಗೂ ಪುಸ್ತಕ ಖರೀದಿ ಅಯ್ಕೆ ಸಮಿತಿಯನ್ನು ಪುನರ್ ರಚಿಸುವಂತೆ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು.

ಕೌನ್ಸಿಲಿಂಗ್ ಮೂಲಕ ವರ್ಗಾವಣೆ: ಶಿಕ್ಷಣ ಇಲಾಖೆಯ ಸುಧಾರಣೆಯ ದೃಷ್ಟಿಯಿಂದ ವರ್ಗಾವಣೆ ಅನಿವಾರ್ಯ. ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಶಿಕ್ಷಕರ ವಗಾವರ್ಣೆಯನ್ನು ಶಿಕ್ಷಕರ ವರ್ಗಾವಣೆ ಅಧಿನಿಯಮದನ್ವಯ ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು ಎಂದು ಶ್ರೀನಿವಾಸ್ ತಿಳಿಸಿದರು.

ಶಿಕ್ಷಕರ ವರ್ಗಾವಣೆಯಲ್ಲಿ ಯಾವುದೇ ಸಮಸ್ಯೆಗಳು, ಗೊಂದಲಗಳು ಕಂಡು ಬಂದಲ್ಲಿ ಅದನ್ನು ಸರಿಪಡಿಸಿಕೊಂಡು ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸುವಂತೆ ಅವರು ನಿರ್ದೇಶನ ನೀಡಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಪಿ.ಸಿ.ಜಾಫರ್, ಸಮಗ್ರ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಎಂ.ಟಿ.ರೇಜು, ನಿರ್ದೇಶಕರು, ಜಂಟಿ ನಿರ್ದೇಶಕರು ಹಾಗೂ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ

ರಾಜ್ಯದಲ್ಲಿ ಕೇಂದ್ರಿಯ ವಿದ್ಯಾಲಯ ಮಾದರಿಯಲ್ಲಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಈ ಶಾಲೆಗಳು ಗ್ರಾಮೀಣ ಮಟ್ಟದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಿವೆ. ಈ ಶಾಲೆಗಳಿಗೆ ರಾಜ್ಯದಲ್ಲಿ ಬಹಳಷ್ಟು ಬೇಡಿಕೆ ಇದ್ದು, ಹಂತ ಹಂತವಾಗಿ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯೋನ್ಮುಖವಾಗಿದೆ.

-ಎಸ್.ಆರ್.ಶ್ರೀನಿವಾಸ್, ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News