ಸಿಎಂ ವಿದೇಶ ಪ್ರವಾಸಕ್ಕೆ ಬಿಎಸ್‌ವೈ ಅನುಮತಿ ಬೇಕಾ?: ಎಚ್.ಡಿ.ದೇವೇಗೌಡ ವಾಗ್ದಾಳಿ

Update: 2019-06-30 13:47 GMT

ಬೆಂಗಳೂರು, ಜೂ.30: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅಮೆರಿಕಾಗೆ ಹೋಗಲು ಬಿಜೆಪಿ ನಾಯಕರಾದ ಯಡಿಯೂರಪ್ಪ ಹಾಗೂ ಈಶ್ವರಪ್ಪನವರ ಅನುಮತಿ ಪಡೆಯಬೇಕೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.

ರವಿವಾರ ನಗರದಲ್ಲಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಬೆಂಗಳೂರು ನಗರ ಘಟಕದ ಪದಾಧಿಕಾರಿಗಳ ಸಭೆಯ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮ ಸಮಾಜದ ಆದಿಚುಂಚನಗಿರಿ ಮಠದ ದೇವಾಲಯ ಸ್ಥಾಪನೆಯ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ ಇದ್ದ ಕಾರಣ ಮುಖ್ಯಮಂತ್ರಿ ಅಮೆರಿಕಾಗೆ ಹೋಗಿದ್ದಾರೆ. ಕುಮಾರಸ್ವಾಮಿ ಯಾರ ದುಡ್ಡಿನಲ್ಲೂ ವಿದೇಶ ಪ್ರವಾಸ ಕೈಗೊಂಡಿಲ್ಲ. ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶಕ್ಕೆ ಹೋಗಿದ್ದಾರೆ ಎಂದು ದೇವೇಗೌಡ ಹೇಳಿದರು. ಬೆಳಗ್ಗೆಯಿಂದ ಸಂಜೆಯವರೆಗೆ ಇದೇ ರೀತಿಯ ಒಂದಲ್ಲ ಒಂದು ವಿಚಾರದ ಬಗ್ಗೆ ಬಿಜೆಪಿ ನಾಯಕರು ಹೇಳಿಕೆಗಳನ್ನು ಕೊಡುತ್ತಲೇ ಇರುತ್ತಾರೆ. ಮುಖ್ಯಮಂತ್ರಿ ವಿದೇಶ ಪ್ರವಾಸ ಕೈಗೊಳ್ಳಲು ಬಿಜೆಪಿ ನಾಯಕರಾದ ಯಡಿಯೂರಪ್ಪ ಹಾಗೂ ಈಶ್ವರಪ್ಪ ಅನುಮತಿ ಪಡೆಯಬೇಕೆ ಎಂದು ದೇವೇಗೌಡ ವ್ಯಂಗ್ಯವಾಡಿದರು.

ರಾಜ್ಯದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಟೀಕೆಗೆ ತಿರುಗೇಟು ನೀಡಿದ ಅವರು, ನಮ್ಮ ಪಕ್ಷವನ್ನು ಸಂಘಟಿಸಲು ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಮೈತ್ರಿ ಸರಕಾರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ನಾನೇ ಸ್ವತಃ ಮುಂದೆ ನಿಂತು ಪಾದಯಾತ್ರೆಯ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದೇನೆ. ಆಗಸ್ಟ್ 20ರಿಂದ ನಮ್ಮ ಪಕ್ಷದ ಪಾದಯಾತ್ರೆ ಆರಂಭಗೊಳ್ಳಲಿದೆ ಎಂದು ದೇವೇಗೌಡ ಹೇಳಿದರು.

ಜೆಡಿಎಸ್ ಬೆಂಗಳೂರು ನಗರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಶಾಸಕ ಕೆ.ಗೋಪಾಲಯ್ಯ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News