ಆಪರೇಷನ್ ಕಮಲಕ್ಕೆ ಮೋದಿ-ಅಮಿತ್ ಶಾ ಕುಮ್ಕಕ್ಕು: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-07-02 13:08 GMT

ಬೆಂಗಳೂರು, ಜು.2: ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳು, ಆಪರೇಷನ್ ಕಮಲಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇರ ಕಾರಣ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯೂ ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡಗೆ ಈ ಬಗ್ಗೆ ಮಾಹಿತಿಯ ಕೊರತೆ ಇರಬಹುದು. ರಾಜ್ಯದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲದ ಬಗ್ಗೆ ಅವರು ಮಾಹಿತಿ ತಿಳಿದುಕೊಂಡು ಮಾತನಾಡಲಿ ಎಂದರು.

ಹಣದ ಆಮಿಷವೊಡ್ಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಈ ಪ್ರಯತ್ನ ಮಾಡುತ್ತಿದ್ದಾರೆ. ಅದೇ ಕೆಲಸವನ್ನು ಈಗ ಮತ್ತೆ ಆರಂಭಿಸಿದ್ದಾರೆ. ಈ ಬಾರಿಯೂ ಅವರು ಯಶಸ್ವಿಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಇನ್ನೂ 10 ಮಂದಿ ಶಾಸಕರು ರಾಜೀನಾಮೆ ಕೊಡುತ್ತಾರೆಂದು ಹರಿದಾಡುತ್ತಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವಾಗಿ ಯಾರನ್ನು ಕರೆಯುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬಂದರೆ ನಾವು ಸರಕಾರ ರಚನೆ ಮಾಡುತ್ತೇವೆ ಎಂದು ಬಿಜೆಪಿಯವರು ಹೊಸ ತಂತ್ರಗಾರಿಕೆ ಮಾಡುತ್ತಿದ್ದಾರೆ. ಬಿಜೆಪಿಯವರು ಅಧಿಕಾರದ ದಾಹದಿಂದ ಹೀಗೆ ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಆನಂದ್‌ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಿದ್ದಾರೆ. ಅವರನ್ನು ಹೊರತುಪಡಿಸಿ ಬೇರೆ ಯಾವ ಶಾಸಕರೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಗೂ ಸೇರುವುದಿಲ್ಲ. ರಾಜ್ಯ ಸರಕಾರ ಸುಭದ್ರವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈಗ ರಾಜೀನಾಮೆ ಕೊಟ್ಟಿರುವ ಇಬ್ಬರು ಶಾಸಕರೂ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ಅವರ ಜೊತೆ ಮಾತುಕತೆ ನಡೆಸುವ ಪ್ರಯತ್ನ ಮಾಡುತ್ತಾ ಇದ್ದೇನೆ. ಆದರೆ, ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಸಮಯದಲ್ಲಿ ತುರ್ತಾಗಿ ಶಾಸಕಾಂಗ ಪಕ್ಷದ ಸಭೆ ಕರೆಯುವ ಅಗತ್ಯವಿಲ್ಲ. ನಿನ್ನೆ ನಾಯಕರು ಬಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News