'ಶಾಸಕರ ರಾಜೀನಾಮೆ' ಹಿಂದೆ ಬಿಜೆಪಿ ಕೈವಾಡ: ಮಾಜಿ ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು, ಜು.2: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಸರಕಾರ ಬೀಳಿಸಬೇಕೆಂದು ಬಯಸುವವರ ಕೈವಾಡ ಇದೆ. ಶಾಸಕರಿಂದ ರಾಜೀನಾಮೆ ಕೊಡಿಸುವುದರ ಹಿಂದೆ ಬಿಜೆಪಿ ಕೈವಾಡವಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡಲು ಮುಂದಾಗಿರುವ ಸರಕಾರದ ಕ್ರಮದ ವಿರುದ್ಧವಾಗಿ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ, ಈ ಕೂಡಲೇ ಅವರು ರಾಜೀನಾಮೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಜಿಂದಾಲ್ ವಿಚಾರಕ್ಕೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ, ಅದು ಆತುರದ ನಿರ್ಧಾರ ಕೈಗೊಂಡಂತೆ ಆಗುತ್ತದೆ. ಅವರು ತಮ್ಮ ತಪ್ಪು ಕಲ್ಪನೆಯಿಂದ ರಾಜೀನಾಮೆ ಕೊಟ್ಟಿದ್ದರೆ ವಾಪಸ್ ಪಡೆಯುವುದು ಸೂಕ್ತ ಎಂದು ಅವರು ಹೇಳಿದರು.
ಜಿಂದಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿ ವರದಿ ಬರುವವರೆಗೂ ಆನಂದ್ ಸಿಂಗ್ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಎಚ್.ಕೆ.ಪಾಟೀಲ್ ಮನವಿ ಮಾಡಿದರು.
ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಸಂಸ್ಥೆಗೆ ಭೂಮಿ ಕೊಡಲು ಅನುಮೋದನೆ ನೀಡಿತ್ತು. ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡಬಾರದೆಂದು ಆಗ್ರಹಿಸಿ ನಾನು ಮುಖ್ಯಮಂತ್ರಿ ಹಾಗೂ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್‌ಗೆ ಪತ್ರ ಬರೆದಿದ್ದೆ. ಆ ಬಳಿಕ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಸಮಿತಿ ಏನು ವರದಿ ಕೊಡುತ್ತೋ ನೋಡೋಣ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡುವುದು ಸರಿಯಲ್ಲ. ಆನಂದ್ ಸಿಂಗ್ ಕೂಡಲೇ ರಾಜೀನಾಮೆ ವಾಪಸ್ ಪಡೆಯಬೇಕು. ಉಪ ಸಮಿತಿ ವರದಿ ಬಂದ ನಂತರ ಈ ಬಗ್ಗೆ ಆನಂದ್ ಸಿಂಗ್ ನಿರ್ಧಾರ ಮಾಡಲಿ ಎಂದು ಎಚ್.ಕೆ.ಪಾಟೀಲ್ ಸಲಹೆ ನೀಡಿದರು.
ಗೃಹ ಸಚಿವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿಯ ವರದಿ ಬಂದ ನಂತರ ನಾನು ಈ ಬಗ್ಗೆ ಮಾತನಾಡುತ್ತೇನೆ. ಉಪ ಸಮಿತಿಯ ಮೇಲೆ ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದರು.