ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ

Update: 2019-07-02 13:19 GMT

ಬೆಂಗಳೂರು, ಜು.2: ವಿಧಾನಮಂಡಲ ಮುಂಗಾರು ಅಧಿವೇಶನ(ಜು.12)ದಲ್ಲಿ ಮೈತ್ರಿ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ತಮ್ಮ ಡಾಲರ್ಸ್ ಕಾಲನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಮೈತ್ರಿ ಸರಕಾರದ ವೈಫಲ್ಯಗಳ ಕುರಿತು ಸದನದಲ್ಲಿ ಯಾವ ರೀತಿ ಸರಕಾರದ ವಿರುದ್ಧ ಹೋರಾಟ ಮಾಡಬೇಕು ಎಂಬ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಿ ಒಂದೂವರೆ ತಿಂಗಳಾಗಿದೆ. ಕಳೆದ 3 ತಿಂಗಳಿನಿಂದಲೂ ಪಕ್ಷ ಬಿಟ್ಟು ಯಾವ ಶಾಸಕರೂ ಹೋಗುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದರೆ, ನಿನ್ನೆ ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಏನು ಹೇಳುತ್ತಾರೆ ಎಂದು ಅವರು ಪ್ರಶ್ನಿಸಿದರು.

ಮೈತ್ರಿ ಸರಕಾರ ಅಸ್ಥಿರಗೊಳಿಸಲು ನಾವೆಲ್ಲಿಯೂ ಆಪರೇಷನ್ ಕಮಲ ಮಾಡುತ್ತೇವೆ ಎಂದು ಹೇಳಿಲ್ಲ. ತಾವು ಯಾವ ಶಾಸಕರನ್ನೂ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್-ಜೆಡಿಎಸ್ ಬೇಕಿದ್ದರೆ ರಿವರ್ಸ್ ಆಪರೇಷನ್ ಮಾಡಿಕೊಂಡು ಸರಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದು ಅವರು ಸವಾಲು ಹಾಕಿದರು.

ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಯನ್ನು ಪರಿಗಣಿಸದ ಮುಖ್ಯಮಂತ್ರಿಯಾಗಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸಬೇಕಾಗಿರುವ ಮುಖ್ಯಮಂತ್ರಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕಾ ಬಹಳ ದೂರವೇನಿಲ್ಲ. ಬೇಗನೆ ರಾಜ್ಯಕ್ಕೆ ಬಂದು ರಿವರ್ಸ್ ಆಪರೇಷನ್ ಮಾಡಿ ಸರಕಾರವನ್ನು ಉಳಿಸಿಕೊಳ್ಳಲಿ ಎಂದು ಅವರು ವ್ಯಂಗ್ಯವಾಡಿದರು.

ಶಾಸಕ ಮಾಧುಸ್ವಾಮಿ ಮಾತನಾಡಿ, ಮೈತ್ರಿ ಸರಕಾರದ ತೆಪ್ಪದಲ್ಲಿ ಮಂಗಗಳು ಕುಳಿತಿದ್ದು, ಮಂಗಗಳು ಆ ಕಡೆ, ಈ ಕಡೆ ಜಿಗಿದಾಕ್ಷಣ ತೆಪ್ಪ ಮುಳುಗಿ ಹೋಗುತ್ತದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ. ಬಿಜೆಪಿಯ ಶಾಸಕರು ಕಾಂಗ್ರೆಸ್-ಜೆಡಿಎಸ್ ಸೇರುತ್ತಾರೆ ಎನ್ನುವುದೆಲ್ಲ ಸುಳ್ಳು. ಪಶ್ಚಿಮ ಬಂಗಾಳದ ಶಾಸಕರುಗಳೇ ಬಿಜೆಪಿ ಕಡೆ ವಾಲಿದ್ದಾರೆ ಎಂದ ಮೇಲೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ರಿವರ್ಸ್ ಆಪರೇಷನ್ ನಡೆಸಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News