ರಮೇಶ್ ವಿರುದ್ಧ ಜಾರಕಿಹೊಳಿ ಕಣಕ್ಕೆ: ಸಚಿವ ಸತೀಶ್ ಜಾರಕಿಹೊಳಿ

Update: 2019-07-02 13:31 GMT

ಬೆಳಗಾವಿ, ಜು.2: ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲಾಗುತ್ತಿದೆ. ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದಾಗಿ ನಡೆಯುವ ಉಪ ಚುನಾವಣೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣಕ್ಕಿಳಿಯಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಮಂಗಳವಾರ ನಗರದಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಗೋಕಾಕ್ ಕ್ಷೇತ್ರದಲ್ಲಿ ಸಹೋದರರ ನಡುವೆ ಸ್ಪರ್ಧೆ ನಡೆದಿತ್ತು. ಇದು ಹೊಸದೇನಲ್ಲ. ರಾಜಕೀಯವೇ ಬೇರೆ, ಕೌಟುಂಬಿಕ ಸಂಬಂಧಗಳೇ ಬೇರೆ ಎಂದರು.

ಕಳೆದ ಲೋಕಸಭೆ ಚುನಾವಣೆ ವೇಳೆ ಗೋಕಾಕ್ ಕ್ಷೇತ್ರದಲ್ಲಿ ಶೇ.50ರಷ್ಟು ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರಲು ಮುಂದಾಗಿರುವುದು ಅವರ ಬೆಂಬಲಿಗರಿಗೆ ಇಷ್ಟವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿಗೆ ಆಪ್ತರು. ಆದರೆ, ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಸರಕಾರ ಉರುಳಿಸಲು 15 ಶಾಸಕರು ರಾಜೀನಾಮೆ ನೀಡಬೇಕು. 14 ಶಾಸಕರು ರಾಜೀನಾಮೆ ನೀಡಿದ ಬಳಿಕ ಮಹೇಶ್ ಕುಮಟಳ್ಳಿ ಸರದಿ ಬರುತ್ತದೆ ಎಂದು ಅವರು ತಿಳಿಸಿದರು.

ಆನಂದ್‌ ಸಿಂಗ್ ತಮ್ಮ ರಾಜೀನಾಮೆ ವಿಷಯವನ್ನು ಮಾಧ್ಯಮಗಳ ಮುಂದೆ ದೃಢಪಡಿಸಿದ್ದಾರೆ. ಆದರೆ, ರಮೇಶ್ ಜಾರಕಿಹೊಳಿಯ ರಾಜೀನಾಮೆ ಇನ್ನೂ ಅಧಿಕೃತವಾಗಿಲ್ಲ. ರಮೇಶ್ ರಾಜೀನಾಮೆ ನೀಡಿದಾಕ್ಷಣ, ಮಹೇಶ್ ರಾಜೀನಾಮೆ ನೀಡಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News