ಎಂ.ಸ್ಯಾಂಡ್ ಘಟಕ ಆರಂಭಿಸಲು ಸತೀಶ್ ಜಾರಕಿಹೊಳಿ ಸೂಚನೆ

Update: 2019-07-02 16:53 GMT

ಬೆಳಗಾವಿ, ಜು.2: ಜಿಲ್ಲೆಯಲ್ಲಿ ಈಗಾಗಲೇ ಅನುಮತಿ ನೀಡಲಾಗಿರುವ ಎಂ.ಸ್ಯಾಂಡ್ ಘಟಕಗಳನ್ನು ಆದಷ್ಟು ಬೇಗ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಂ.ಸ್ಯಾಂಡ್ ಗುಣಮಟ್ಟದ ಬಗ್ಗೆ ನಿರಂತರ ಪರಿಶೀಲನೆ ಕೈಗೊಳ್ಳಬೇಕು. ಅದೇ ರೀತಿ ಘಟಕಗಳು ಪ್ರತಿ ತಿಂಗಳು ಸ್ವಯಂಪ್ರೇರಣೆಯಿಂದ ತಮ್ಮ ಉತ್ಪಾದನೆಯ ಗುಣಮಟ್ಟವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಘಟಕಗಳಿಗೆ ಸೂಚನೆ ನೀಡುವಂತೆ ತಿಳಿಸಿದರು.

ಅಕ್ರಮ ಸಾಗಾಣಿಕೆ ತಡೆಗಟ್ಟಲು ಎಲ್ಲ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕ್ರಷರ್ ನವೀಕರಣಕ್ಕೆ 67 ಅರ್ಜಿ ಬಂದಿವೆ. 61 ಅರ್ಜಿ ವಿಲೇವಾರಿಗೆ ಬಾಕಿ ಉಳಿದಿವೆ. ಒಂದು ತಿರಸ್ಕೃತಗೊಂಡಿದ್ದು, ಒಂದು ಘಟಕಕ್ಕೆ ಅನುಮತಿ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ವಿವರಣೆ ನೀಡಿದರು.

ಕೆಐಎಡಿಬಿ ವತಿಯಿಂದ ಜಮೀನು ಪಡೆದುಕೊಂಡು ಇದುವರೆಗೂ ಕೈಗಾರಿಕೆ ಆರಂಭಿಸದಿರುವವರಿಗೆ ನೋಟಿಸ್ ನೀಡಬೇಕು. ಕಿತ್ತೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ನಿಗದಿತ ಪ್ರದೇಶದಲ್ಲಿ ಕೈಗಾರಿಕಾ ಸ್ಥಾಪನೆಗೆ ಯಾರಾದರೂ ಮುಂದೆ ಬಂದರೆ ಮಾತ್ರ ಜಮೀನು ಗುರುತಿಸಿ ಅವರಿಗೆ ಹಸ್ತಾಂತರಿಸಬೇಕು ಎಂದು ಸತೀಶ್ ಜಾರಕಿಹೊಳಿ ಸೂಚಿಸಿದರು.

ನಿರ್ದಿಷ್ಟ ಉದ್ದೇಶವಿಲ್ಲದೇ ಸಾವಿರಾರು ಎಕರೆ ಬ್ಲಾಕ್ ಮಾಡಬಾರದು. ನೇಸರಗಿ ಭಾಗದಲ್ಲಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಬೇಕು. 220 ಕೆ.ವಿ. ವಿದ್ಯುತ್ ಸ್ಟೇಷನ್ ಸ್ಥಾಪನೆಗೆ ಅಗತ್ಯವಿರುವ ಜಮೀನನ್ನು ಗುರುತಿಸಿ, ಅದನ್ನು ವಿದ್ಯುತ್ ಇಲಾಖೆಗೆ ಒದಗಿಸುವಂತೆ ಅವರು ತಿಳಿಸಿದರು.

ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಲಹೆ: ಬೆಳಗಾವಿ ನಗರ ಬೆಳೆಯುತ್ತಿರುವುದರಿಂದ ಮತ್ತೊಂದು ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಯ ಅಗತ್ಯವಿದ್ದು, ಈ ಬಗ್ಗೆ ಪ್ರಸ್ತಾವ ತಯಾರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಬೆಳಗಾವಿ ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಸ್ಥಾಪನೆ ಮಾಡುವುದರಿಂದ ತ್ಯಾಜ್ಯ ಸಾಗಾಣಿಕೆಗೆ ಅನುಕೂಲವಾಗಲಿದೆ. ಸವದತ್ತಿ ಮತ್ತು ಬೆಳಗಾವಿಯಲ್ಲಿರುವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕಗಳ ಸಮರ್ಪಕ ನಿರ್ವಣೆಗಾಗಿ ಏರಿಯಾ ಹಂಚಿಕೆ ಮಾಡುವಂತೆಯೂ ಅವರು ತಿಳಿಸಿದರು.

ಜಿಲ್ಲೆಯ ಕೈಗಾರಿಕಾ ಕೇಂದ್ರಗಳಿಂದ ಹೊರಹೋಗುವ ಮಲೀನ ನೀರು ನೇರವಾಗಿ ನದಿ ಸೇರದಂತೆ ಕ್ರಮ ಕೈಗೊಳ್ಳಬೇಕು. ಪ್ಲಾಸ್ಟಿಕ್ ತ್ಯಾಜ್ಯವನ್ನು ಸೂಕ್ತವಾಗಿ ವಿಲೇವಾರಿ ಮಾಡದಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಸ್ಥಳೀಯ ಜನರಿಗೆ ಉದ್ಯಮ ಸ್ಥಾಪನೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 20 ರಿಂದ 30 ಎಕರೆ ಜಮೀನು ಅಭಿವೃದ್ಧಿಪಡಿಸಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್‌ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶಶಿಧರ್ ಕುರೇರ್, ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪಎಚ್.ಬಿ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News