ಹೊಸ ತಾಲೂಕುಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು: ಸಚಿವ ಆರ್.ವಿ.ದೇಶಪಾಂಡೆ

Update: 2019-07-03 13:04 GMT

ಕಲಬುರಗಿ, ಜು.3: ಹೊಸದಾಗಿ ರಚನೆಯಾಗಿರುವ ತಾಲೂಕುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಜು.4ರಂದು ಬೆಂಗಳೂರಿನಲ್ಲಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬುಧವಾರ ಅಫಜಲಪುರ ತಾಲೂಕಿನ ಗೊಬ್ಬುರ ಗ್ರಾಮದಲ್ಲಿ ಕೆರೆಯ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ತಾಲೂಕುಗಳಲ್ಲಿ ಕೇವಲ ಕಂದಾಯ ಕಚೇರಿಗಳಷ್ಟೇ ಆರಂಭವಾಗಿದೆ. ಹೀಗಾಗಿ ಎಲ್ಲ ರೀತಿಯ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಾದ್ಯಂತ ಬರಗಾಲ ಕಾಮಗಾರಿ ಕೈಗೆತ್ತಿಕೊಳ್ಳಲು ಹಣದ ಕೊರತೆಯಿಲ್ಲ. ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಖಾತೆಯಲ್ಲಿ 600ಕೋಟಿ ರೂ.ಇದೆ. ಕಲಬುರಗಿ ಜಿಲ್ಲಾಧಿಕಾರಿ ಖಾತೆಯಲ್ಲಿ 12 ಕೋಟಿ ರೂ.ಇದೆ. ಈ ಹಣವನ್ನು ಬಳಸಿಕೊಂಡು ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಬರಗಾಲ ಕಾಮಗಾರಿಗಳನ್ನು ಪರಿಶೀಲಿಸಲು ಕಂದಾಯ, ಸಹಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಚಿವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಟ್ಯಾಂಕರ್ ನೀರು ಪೂರೈಕೆಯಲ್ಲಿ ಮೂರು ತಿಂಗಳಿಗಿಂತ ಹೆಚ್ಚು ವಿಸ್ತರಿಸಬಾರದು ಎಂಬುದು ಕೇಂದ್ರ ಸರಕಾರದ ನಿಯಮ. ಆದಾಗ್ಯು, ಎಷ್ಟು ಬೇಕಾದರು ವಿಸ್ತರಿಸಬಹುದು ಎಂದು ಸಡಿಲಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಈ ವೇಳೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿ.ಪಂ.ಸಿಇಒ ಡಾ.ರಾಜಾ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News