ಚುನಾವಣೆ ಸೋಲಿಗೆ ರಾಹುಲ್ ಗಾಂಧಿ ಕಾರಣರಲ್ಲ: ಎಚ್.ಡಿ.ದೇವೇಗೌಡ

Update: 2019-07-03 14:22 GMT

ಬೆಂಗಳೂರು, ಜು.3: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ. ಅವರ ಮನಸ್ಸಿಗೆ ನೋವಾಗಿರುವುದರಿಂದ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.

ಬುಧವಾರ ನಗರದಲ್ಲಿನ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿ ಹಲವಾರು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ್ದರು. ಅವರಲ್ಲಿ ಹೋರಾಟ ಮನೋಭಾವನೆಯಿದೆ ಎಂದರು.

ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಚಾರ ಮಾಡಿದ್ದರು. ಆದರೆ, ದೇಶದ ಜನತೆ ನರೇಂದ್ರಮೋದಿಗೆ ಆಶೀರ್ವಾದ ಮಾಡಿದರು ಎಂದು ದೇವೇಗೌಡ ಹೇಳಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಯಾವ ಅರ್ಥದಲ್ಲಿ ಹೇಳಿಕೆಯನ್ನು ಕೊಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ, ವಿಶ್ವನಾಥ್ ನಮ್ಮ ಪಕ್ಷವನ್ನು ಬಿಟ್ಟು ಎಲ್ಲೂ ಹೋಗುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿ ಪಕ್ಷಕ್ಕೆ ಸೇರುವಂತೆ ತಮಗೆ ಹಣದ ಆಮಿಷವೊಡ್ಡಲಾಗಿತ್ತು ಎಂದು ಪಿರಿಯಾಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ಮಹದೇವ್ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡ, ಇಂತಹ ವಿಚಾರಗಳ ಬಗ್ಗೆ ನನಗೆ ಏನು ಕೇಳಬೇಡಿ. ಅದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸೋತಿರುವುದರಿಂದ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಮೈತ್ರಿ ಸರಕಾರಕ್ಕೆ ಧಕ್ಕೆ ಬರದಂತೆ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ದೇವೇಗೌಡ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 37 ಸ್ಥಾನ ಮಾತ್ರ ಬಂತು. ಆದರೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಮ್ಮ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಿದರು. ಕಾಂಗ್ರೆಸ್ ಹಿರಿಯ ನಾಯಕರ ಸಮ್ಮುಖದಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸರಕಾರ ತನ್ನ ಮೊದಲ ವರ್ಷದ ಅಧಿಕಾರಾವಧಿಯನ್ನು ಪೂರೈಸಿದೆ ಎಂದು ಅವರು ತಿಳಿಸಿದರು.

ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಇನ್ನು ಐದಾರು ಮಂದಿ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಮೆರಿಕಾದಲ್ಲಿರುವ ಮುಖ್ಯಮಂತ್ರಿ ಎಲ್ಲರನ್ನೂ ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡ ಹೇಳಿದರು.

ಮೈತ್ರಿ ಸರಕಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಇನ್ನಿತರ ಹಿರಿಯ ನಾಯಕರು ಕ್ರಮ ಕೈಗೊಳ್ಳುತ್ತಾರೆ ಎಂದ ಅವರು, ಇವತ್ತು ಅಲ್ಪಸಂಖ್ಯಾತ ಮುಖಂಡರ ಸಭೆ ಕರೆಯಲಾಗಿದೆ. ಎರಡು-ಮೂರು ದಿನಗಳಲ್ಲಿ ಅಲ್ಪಸಂಖ್ಯಾತ ಘಟಕಗಳ ನೇಮಕ ಮಾಡಲಾಗುವುದು ಎಂದರು.

ಈ ವೇಳೆ ವೇದಿಕೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೆಎಂಡಿಸಿ ಅಧ್ಯಕ್ಷ ಮುಹಮ್ಮದ್ ಝಫ್ರುಲ್ಲಾ ಖಾನ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತ ಮುಖಂಡರ ವಾಗ್ವಾದ

ಪಕ್ಷದ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ನಡುವೆ ಪರಸ್ಪರ ವಾಗ್ವಾದ ನಡೆದ ಘಟನೆ ಜರುಗಿತು.

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ಮೈತ್ರಿ ಸೂತ್ರದಂತೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿಲ್ಲ. ಇದರಿಂದಾಗಿ, ಕಾಂಗ್ರೆಸ್ ಅಭ್ಯರ್ಥಿ ಸೋಲುವಂತಾಯಿತು ಎಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಲ್ತಾಫ್ ಖಾನ್ ನೀಡಿದ ಹೇಳಿಕೆಯು ವಾಗ್ವಾದಕ್ಕೆ ಕಾರಣವಾಯಿತು.

ಅಲ್ತಾಫ್ ಖಾನ್ ಹೇಳಿಕೆಯಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು, ಭಾಷಣ ನಿಲ್ಲಿಸುವಂತೆ ಕೂಗಿದರು. ಈ ವೇಳೆ ವೇದಿಕೆಯಲ್ಲಿದ್ದ ಮುಖಂಡರು ಭಾಷಣ ಮೊಟಕುಗೊಳಿಸಿ ಕುಳಿತುಕೊಳ್ಳುವಂತೆ ಅಲ್ತಾಫ್‌ಗೆ ಸೂಚನೆ ನೀಡಿದರು. ಮುಖಂಡರ ಪರಸ್ಪರ ವಾಗ್ವಾದವನ್ನು ಮೌನವಾಗಿಯೇ ದೇವೇಗೌಡ ವೀಕ್ಷಿಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News