ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಬಿವಿಪಿ ನಿಷೇಧಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಧರಣಿ

Update: 2019-07-03 16:03 GMT

ಶಿವಮೊಗ್ಗ, ಜು.3: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಎಬಿವಿಪಿ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಬೇಕು. ಆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ಧರಣಿ ನಡೆಸಿತು.

ಬುಧವಾರ ಸಂಜೆ ಸಂಘಟನೆಯ ಕಾರ್ಯಕರ್ತರು ನಗರದ ಶಿವಪ್ಪ ನಾಯಕನ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಅತ್ಯಾಚಾರ ಆರೋಪಿಗಳ ಭಾವಚಿತ್ರ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಆರೋಪಿಗಳ ಕೃತ್ಯವು ಅತ್ಯಂತ ಹೇಯವಾಗಿದೆ. ಅತ್ಯಾಚಾರವೆಸಗಿ ಅದರ ವಿಡಿಯೋ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಇದರಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ಸಂಘಟನೆಯನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ  ಬಾದರ್ಲಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಪ್ರವೀಣ್ ಕುಮಾರ್, ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೀಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೆ.ರಂಗನಾಥ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಗಿರೀಶ್, ಶಿಕಾರಿಪುರ ಕ್ಷೇತ್ರ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ದರ್ಶನ್ ಉಳ್ಳಿ, ರಾಜ್ಯ ಕಾರ್ಯದರ್ಶಿ ಆರ್.ಕಿರಣ್, ಪಾಲಿಕೆ ಸದಸ್ಯ ಶಮೀರ್ ಖಾನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಆರಿಫುಲ್ಲಾ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಿಆರ್ ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಶರವಣ, ಮಸ್ತಾನ್ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News