ವಿದ್ಯಾರ್ಥಿನಿಯ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ: ಎಸ್‌ಡಿಪಿಐ ನಾಯಕ ಪುಟ್ಟನಂಜಯ್ಯ
ಬೆಂಗಳೂರು, ಜು.4: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವೇಕಾನಂದ ಕಾಲೇಜಿನ ದಲಿತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಎಬಿವಿಪಿ ಕಾರ್ಯಕರ್ತರೆನ್ನಲಾದ ಅರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಎಸ್‌ಡಿಪಿಐ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ ಒತ್ತಾಯಿಸಿದ್ದಾರೆ.
ದೇಶದಾದ್ಯಂತ ದಲಿತರ ಮೇಲೆ ಹಲ್ಲೆ, ಅತ್ಯಾಚಾರ ಹಾಗೂ ಕೊಲೆಗಳು ನಿರಂತರವಾಗಿ ನಡೆಯುತ್ತಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇದರ ಪರಿಣಾಮವಾಗಿ ಪುತ್ತೂರಿನಲ್ಲಿ ದಲಿತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಈಗ ಪೊಲೀಸ್ ಇಲಾಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕಾಗಿದೆ. ಆ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಬೇಕಾಗಿದೆ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.