ಕನಕಪುರ ಬಳಿ 800 ಕೋಟಿ ರೂ.ವೆಚ್ಚದ ಸುಸಜ್ಜಿತ ಅಸ್ಪತ್ರೆ ನಿರ್ಮಾಣ: ಡಿ.ಕೆ.ಶಿವಕುಮಾರ್

Update: 2019-07-05 16:57 GMT

ಬೆಂಗಳೂರು, ಜು.5: ಕನಕಪುರದ ತುಂಗಣಿ ಬಳಿ ಸದ್ಯದಲ್ಲೇ 800 ಕೋಟಿ ರೂ. ವೆಚ್ಚದ ವೈದ್ಯಕೀಯ ಕಾಲೇಜು ಹಾಗೂ ಸುಸಜ್ಜಿತ ಅಸ್ಪತ್ರೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರ ಕನಕಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರ ಕುಂದುಕೊರತೆ ಆಲಿಸಿದ ಬಳಿಕ ಅವರು ಮಾತನಾಡಿದರು.

ಕನಕಪುರ ಹೆಬ್ಬಾಗಿಲಾದ ತುಂಗಣಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಬೃಹತ್ ಅಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದ್ದು, ಸಾವಿರಕ್ಕೂ ಹೆಚ್ಚು ವೈದ್ಯರು ಹಾಗೂ ಇತರ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಹೇಳಿದರು.

ಮುಂದಿನ ತಿಂಗಳು ಮುಖ್ಯಮಂತ್ರಿ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಇಡೀ ರಾಜ್ಯದಲ್ಲೇ ತಾಲೂಕು ಕೇಂದ್ರವೊಂದರಲ್ಲಿ ಇಂತಹ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಇದೇ ಪ್ರಥಮ. ಈ ಆಸ್ಪತ್ರೆಯಲ್ಲದೇ ದಯಾನಂದ ಸಾಗರ್ ಅವರು ಸಹ ವೈದ್ಯಕೀಯ ವಿಶ್ವವಿದ್ಯಾಲಯ ಆರಂಭಿಸುತ್ತಿದ್ದು, ಇಲ್ಲಿನ ಜನರಿಗೆ ಉಚಿತ ಸೇವೆ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಕನಕಪುರ ತಾಲೂಕಿನ ಎಲ್ಲ ಹಳ್ಳಿಗಳಿಗೆ 230 ಕೋಟಿ ರೂ. ವೆಚ್ಚದಲ್ಲಿ ಸಂಗಮದಿಂದ ಕುಡಿಯುವ ನೀರು ಒದಗಿಸುವ ಯೋಜನೆ ಭರದಿಂದ ಸಾಗಿದೆ. ರೈತರ ಜಮೀನಿನ ಪೋಡಿ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದ ಅವರು, ಆಧಾರ್ ನೋಂದಣಿಯಲ್ಲಿ ಉಂಟಾಗುತ್ತಿರುವ ವಿಳಂಬವನ್ನು ಸರಿಪಡಿಸುವಂತೆ ಆದೇಶ ನೀಡಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ, ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಎಲ್ಲ ರೈತರು ನೋಂದಾಯಿಸಿಕೊಳ್ಳುವಂತೆ ಕರೆ ನೀಡಿದರು. ವಿಧಾನಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾಪಂಚಾಯತ್ ಅಧ್ಯಕ್ಷ ನಾಗರಾಜ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಪಿ.ಮುಲೈ ಮುಹಿಲನ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News