ಶಾಸಕರ ರಾಜೀನಾಮೆ ಹಿಂದೆ ಮೋದಿ ಸರಕಾರದ ಕೈವಾಡ: ಮಲ್ಲಿಕಾರ್ಜುನ ಖರ್ಗೆ ಆರೋಪ

Update: 2019-07-07 12:13 GMT

ಬೆಂಗಳೂರು, ಜು.7: ರಾಜ್ಯದ ರಾಜಕೀಯದಲ್ಲಿ ಉಂಟಾಗಿರುವ ಅಸ್ತಿರತೆಗೆ ಬಿಜೆಪಿಯೇ ಕಾರಣ. ನಮ್ಮ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ತೆರಳಲು ಅವರಿಗೆ ವಿಮಾನ, ಐಷಾರಾಮಿ ಹೊಟೇಲ್‌ನ ವ್ಯವಸ್ಥೆ ಮಾಡಿರುವುದು ಬಿಜೆಪಿಯವರೇ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ದಶಕಗಳ ಕಾಲ ಉನ್ನತ ಹುದ್ದೆಯಲ್ಲಿದ್ದವರು ಸಹ ರಾಜೀನಾಮೆ ನೀಡಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡ ಇರುವುದು ನಿಶ್ಚಿತ. ಆದರೆ, ಅತೃಪ್ತ ಶಾಸಕರನ್ನು ಮನವೊಲಿಸುವಲ್ಲಿ ಎಷ್ಟರ ಮಟ್ಟಿಗೆ ನಾವು ಯಶಸ್ವಿಯಾಗುತ್ತೇವೆ ಅನ್ನೋದನ್ನು ಕಾದು ನೋಡಬೇಕು ಎಂದರು.

ಕೇಂದ್ರದ ಬಿಜೆಪಿ ಸರಕಾರಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ರಾಜ್ಯದಲ್ಲಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಸರಕಾವನ್ನು ಅಸ್ತಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಶಾಸಕರ ರಾಜೀನಾಮೆ ಹಿಂದೆ ನರೇಂದ್ರ ಮೋದಿ ಸರಕಾರದ ಕೈವಾಡ ಇದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಎಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ಸರಕಾರ ಅಧಿಕಾರದಲ್ಲಿರಬೇಕು ಅನ್ನೋದು ಮೋದಿ ಬಯಕೆ. ಈವರೆಗೆ 14 ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಸೇರಿದಂತೆ 13 ರಾಜ್ಯಗಳನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಅವರು ದೂರಿದರು.

ಚುನಾಯಿತ ಸರಕಾರವನ್ನು ಅಸ್ತಿರಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿರುವ ಬಿಜೆಪಿ ಧೋರಣೆಯನ್ನು ಜನತೆ ಎಂದಿಗೂ ಒಪ್ಪುವುದಿಲ್ಲ. ಶಾಸಕರನ್ನು ಹೆದರಿಸುವುದು, ಬೆದರಿಸುವ ಕೆಲಸವನ್ನು ಮಾಡಬಾರದು. ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುತ್ತದೋ ಇಲ್ಲವೋ ಎಂಬ ಆತಂಕ ಎದುರಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಯಾವ ಕಾರಣಕ್ಕಾಗಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೋ ಗೊತ್ತಿಲ್ಲ ಎಂದ ಅವರು, ಇದೇ ವೇಳೆ ತಮ್ಮನ್ನು ಮುಖ್ಯಮಂತ್ರಿ ಮಾಡಲಾಗುತ್ತಿದೆ ಎಂದು ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News