ರಾಜಕೀಯ ಅನಿಶ್ಚಿತತೆ ನಡುವೆಯೇ ರೈತರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ

Update: 2019-07-08 13:24 GMT

ಬೆಂಗಳೂರು, ಜು. 8: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರಕ್ಕೆ ಎದುರಾಗಿರುವ ರಾಜಕೀಯ ಅನಿಶ್ಚಿತತೆಯ ಮಧ್ಯೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಧಾನಸೌಧದಲ್ಲಿ ಕಬ್ಬು ಬೆಳೆಗಾರರೊಂದಿಗೆ ಸಭೆ ನಡೆಸಿ ಅಚ್ಚರಿ ಮೂಡಿಸಿದ್ದಾರೆ.

ಸೋಮವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಮಂಡ್ಯದ ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತನ್ನ ಅಧ್ಯಕ್ಷತೆಯಲ್ಲಿ ಸಿಎಂ ಕುಮಾರಸ್ವಾಮಿ ರೈತರು ಮತ್ತು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.

ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ರೈತರೊಂದಿಗೆ ಮೊದಲೇ ಸಭೆ ನಿಗದಿಯಾಗಿತ್ತು. ಅಮೆರಿಕಾಗೆ ತೆರಳುವ ವೇಳೆ ರೈತರಿಗೆ ತಿಳಿಸಿದಂತೆ ಕಾರ್ಖಾನೆ ಪುನಶ್ಚೇತನ ಸಂಬಂಧ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದ ಮೂತ್ರಿ ಸರಕಾರ ಸಂಕಷ್ಟದಲ್ಲಿದ್ದರೂ, ಆ ಬಗ್ಗೆ ಯಾವುದೇ ಚಿಂತೆ ಇಲ್ಲದೆ ಸಿಎಂ ಕುಮಾರಸ್ವಾಮಿ ನಿರಾಳ ಮನೋಭಾವದಲ್ಲಿ ರೈತರೊಂದಿಗೆ ಸಭೆ ನಡೆಸಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದೆ.

‘ಬಿಜೆಪಿಯವರೋ ಅಥವಾ ಇನ್ಯಾರೋ ಏನು ಮಾಡುತ್ತಾರೆಂಬ ಬಗ್ಗೆ ನಾನು ಗಮನ ಹರಿಸದೆ, ನನ್ನ ಕೆಲಸ ಏನು ಅದನ್ನು ನಾನು ಮಾಡುತ್ತೇನೆ. ಸರಕಾರಕ್ಕೆ ಏನು ಆಗುವುದಿಲ್ಲ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇದೇ ವೇಳೆ ಪ್ರತಿಕ್ರಿಯೆ ನೀಡಿದರು.

ರಾಜ್ಯದಲ್ಲಿನ ಮೈತ್ರಿ ಸರಕಾರ ಸುಭದ್ರವಾಗಿದ್ದು, ರಾಜಕೀಯ ಬೆಳವಣಿಗೆಯ ಬಗ್ಗೆ ಯಾವುದೇ ಆತಂಕ ನನಗಿಲ್ಲ. ರಾಜ್ಯದ ಹಿತದೃಷ್ಟಿಯಿಂದ ಮೈ ಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ರೈತ ಮುಖಂಡರನ್ನು ಸಮಾಲೋಚನೆ ನಡೆಸಿದ್ದೇನೆ ಎಂದು ಇದೇ ವೇಳೆ ಸ್ಪಷ್ಟನೆ ನೀಡಿದರು.

ಸಭೆಯಲ್ಲಿ ರೇಶ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಮಂಡ್ಯ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಸಕ್ಕರೆ ಸಚಿವ ಆರ್.ಬಿ.ತಿಮ್ಮಾಪುರ್, ರೆೈತರ ಮುಖಂಡರಾದ ಸುನಂದ ಜಯರಾಮ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News