ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

Update: 2019-07-09 17:36 GMT

ಬೆಂಗಳೂರು, ಜು.9: ಸಮ್ಮಿಶ್ರ ಸರಕಾರವನ್ನು ಅತಂತ್ರಗೊಳಿಸಲು ಬಿಜೆಪಿ ನಾಯಕರು ಅಸಂವಿಧಾನವಾಗಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಖರೀದಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣಿ ನಡೆಸಿದರು.

ಸೋಮವಾರ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಂ.ರಾಜಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಆರ್.ವಿ.ದೇವರಾಜ್, ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಬಿಬಿಎಂಪಿಯ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಸಂವಿಧಾನಾತ್ಮಕವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿರುವುದರಿಂದ ಜನತೆಗೆ ಮೂಲಭೂತ ಸೌಕರ್ಯಗಳಲ್ಲಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸರಕಾರ ಸಮರೋಪಾದಿಯಲ್ಲಿ ಸಿದ್ಧತೆಯಲ್ಲಿ ತೊಡಗಿರುವಾಗ ಬಿಜೆಪಿ ನಾಯಕರು ಸರಕಾರವನ್ನು ಉರುಳಿಸುವಂತಹ ಷಡ್ಯಂತ್ರ ನಡೆಸಿರುವುದು ನೀಚತನದ ಪರಮಾವಧಿಯೆಂದು ಧರಣಿ ನಿರತರು ಕಿಡಿಕಾರಿದರು.

ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಕೋಟ್ಯಂತರ ರೂ.ಹಣ ಕೊಟ್ಟು ಖರೀದಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಇದೆಲ್ಲವನ್ನು ಜನತೆ ಕೂಲಂಕಷವಾಗಿ ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆಂದು ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಎಚ್ಚರಿಕೆ ನೀಡಿದರು.

ದೇಶಾದ್ಯಂತ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂ.ಹಣ ವ್ಯಯಿಸುತ್ತಿದ್ದಾರೆ. ಇಷ್ಟು ಹಣ ಯಾರು ಕೊಡುತ್ತಾರೆ. ಈ ಹಣದ ಹಿನ್ನೆಲೆ ಕುರಿತು ನ್ಯಾಯಾಂಗ ತನಿಖೆ ಆಗಬೇಕು. ಆಗ ಮಾತ್ರ ಬಿಜೆಪಿ ಬಣ್ಣ ಬಯಲಾಗುತ್ತದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪಕ್ಷ ಕಟ್ಟಿ ಬೆಳೆಸಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್‌ನ ಯಾವ ಶಾಸಕರು ರಾಜೀನಾಮೆ ನೀಡಬಾರದು. ನಿಮ್ಮ ನೇತೃತ್ವದಲ್ಲಿ ಕಾಂಗ್ರೆಸ್‌ನಲ್ಲಿ ದುಡಿಯಲು ನಾವು ಉತ್ಸುಕರಾಗಿದ್ದೇವೆ. ನಿಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಪಕ್ಷದೊಳಗೆ ಹೋರಾಟ ಮಾಡಿ, ನಿಮ್ಮ ಜೊತೆ ನಾವು ಇರುತ್ತೇವೆ. ಯಾವುದೆ ಕಾರಣಕ್ಕೂ ಕೋಮುವಾದಿ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ನೀಡಲು ಅವಕಾಶ ನೀಡಬಾರದು.

-ಪುಷ್ಪಾ ಅಮರನಾಥ್, ಅಧ್ಯಕ್ಷೆ, ಕೆಪಿಸಿಸಿ ಮಹಿಳಾ ವಿಭಾಗ

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News